ವಿಜಯಸಾಕ್ಷಿ ಸುದ್ದಿ, ಗದಗ: ಪ್ರಜಾಪ್ರಭುತ್ವದ ಮೌಲ್ಯಗಳಾದ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ, ವಿಚಾರ, ಅಭಿವ್ಯಕ್ತಿ, ನಂಬಿಕೆ, ಧರ್ಮ ಮತ್ತು ಉಪಾಸನೆಯ ಸ್ವಾತಂತ್ರ್ಯ, ಸ್ಥಾನಮಾನ ಮತ್ತು ಅವಕಾಶಗಳ ಸಮಾನತೆ ದೊರೆಯುವಂತೆ ಮಾಡುವುದಕ್ಕಾಗಿ ವ್ಯಕ್ತಿಗೌರವ, ದೇಶದ ಏಕತೆ ಮತ್ತು ಸಮಗ್ರತೆಗಾಗಿ ಎಲ್ಲರಲ್ಲಿ ಭ್ರಾತೃತ್ವ ಭಾವನೆಯನ್ನು ಮೂಡಿಸುವುದಕ್ಕಾಗಿ ದೃಢಸಂಕಲ್ಪ ಮಾಡಿ, ನಮ್ಮ ಸಂವಿಧಾನ ಸಭೆಯಲ್ಲಿ 1949ರ ನವೆಂಬರ್ 26ರಂದು ಈ ಸಂವಿಧಾನವನ್ನು ನಮಗೆ ನಾವೇ ಅರ್ಪಿಸಿಕೊಂಡು ಅಂಗೀಕರಿಸಿ ಶಾಸನವಾಗಿ ವಿಧಿಸಿಕೊಂಡಿದ್ದೇವೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ನುಡಿದರು.
ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ಸೋಮವಾರ ಜರುಗಿದ ಗಣರಾಜ್ಯೋತ್ಸವ ದಿನಾಚರಣೆ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಸಂವಿಧಾನದ ರಕ್ಷಕರಾಗಿರುವ, ಉನ್ನತ ಹುದ್ದೆ ಅಲಂಕರಿಸಿ ಸಂವಿಧಾನದ ಅಡಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿರುವ ನಮ್ಮ ದೇಶದ ಜವಾಬ್ದಾರಿಯುತರು ತಮ್ಮ ಮನಸೋ ಇಚ್ಛೆಯಂತೆ ಅದನ್ನು ಅರ್ಥೈಸಿ ಅಗೌರವಿಸುವ, ಸಂವಿಧಾನವನ್ನು ಉಲ್ಲಂಘಿಸುವ ಕೆಲಸ ನಡೆಯುತ್ತಿರುವುದು ಅತ್ಯಂತ ವಿಷಾದದ ಸಂಗತಿ. ಸಂವಿಧಾನದ ಅಡಿಯಲ್ಲಿ ಕಾರ್ಯನಿರ್ವಹಿಸುವ ಸಂದರ್ಭದಲ್ಲಿ ಅತ್ಯಂತ ಸೂಕ್ಷ್ಮವಾದ ಮತ್ತು ಗಂಭೀರವಾದ ವಿಷಯಗಳನ್ನು ಶಾಸನಸಭೆಗಳಲ್ಲೂ ಸಹ ಗಮನಿಸದೇ ಕೇವಲ ತಮ್ಮ ರಾಜಕೀಯ ನಿಲುವುಗಳಿಗೆ ಪೂರಕವಾಗಿ ವ್ಯಾಖ್ಯಾನಿಸುತ್ತಿರುವುದು ಕಳವಳಕಾರಿಯಾಗಿದೆ ಎಂದರು.
ರಾಜ್ಯದಿಂದ ಹೆಚ್ಚಿನ ತೆರಿಗೆ ಕೊಡುಗೆಯನ್ನು ಕೇಂದ್ರಕ್ಕೆ ನೀಡುತ್ತಿದ್ದರೂ ಅತ್ಯಂತ ಕನಿಷ್ಠ ನೆರವು ನಮಗೆ ಹರಿದುಬರುತ್ತಿದೆ. ಇದರ ಹೊರತಾಗಿಯೂ ಕರ್ನಾಟಕವು ತನ್ನ ಸ್ವಂತ ಸಂಪನ್ಮೂಲಗಳದಿಂದ ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ರಾಜ್ಯದ 1.25 ಕೋಟಿ ಕುಟುಂಬಗಳನ್ನು ಬಡತನ ರೇಖೆಯಿಂದ ಮೇಲೆತ್ತಿದೆ. ಕರ್ನಾಟಕದ ತಲಾ ಆದಾಯವು ಜಿಲ್ಲಾವಾರು ಲೆಕ್ಕ ಹಾಕಿದಾಗ ಗಣನೀಯವಾಗಿ ಹೆಚ್ಚಾಗಿರುವುದು ನೆಮ್ಮದಿ ತಂದಿದೆ. ಗದಗಿನಂಥ ಜಿಲ್ಲೆಯಲ್ಲಿ ಅರ್ಥ ವ್ಯವಸ್ಥೆಯು ಅಭಿವೃದ್ಧಿ ಪಥದಲ್ಲಿ ಮುನ್ನುಗ್ಗುತ್ತಿದ್ದು, ತಲಾ ಆದಾಯವು ಕನಿಷ್ಠ ರೂ.22000 ಪ್ರತಿ ತಿಂಗಳಿಗೆ ತಲುಪಿರುವುದು ಸಂತಸದ ಸಂಗತಿಯಾಗಿದೆ ಎಂದರು.
ಸಂವಿಧಾನದ ಅಡಿಯಲ್ಲಿ ಕಾರ್ಯನಿರ್ವಹಿಸಬೇಕಾದದ್ದು ನಮ್ಮ ಕರ್ತವ್ಯ. ಸಂವಿಧಾನದ ಆಣತಿಗಳನ್ನು ಮತ್ತು ನಿರ್ದೇಶನಗಳನ್ನು ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಚಲನಶೀಲಗೊಳಿಸುವ ಸದುದ್ದೇಶದಿಂದ ಪಾಲನೆ ಮಾಡಬೇಕಾದುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಸಂವಿಧಾನವನ್ನು ಉಲ್ಲಂಘಿಸುವ ಸಣ್ಣ ಕ್ರಿಯೆಯನ್ನು ಸಹ ಅತ್ಯಂತ ಗಂಭೀರವಾಗಿ ಪರಿಗಣಿಸಬೇಕಾದ ಅವಶ್ಯಕತೆ ಮತ್ತು ಜವಾಬ್ದಾರಿ ಭಾರತೀಯ ನಾಗರಿಕನದ್ದಾಗಿದ್ದು, ಈ ಜವಾಬ್ದಾರಿಯನ್ನು ನಾಗರಿಕರು ಅತ್ಯಂತ ಹೊಣೆಗಾರಿಕೆಯಿಂದ ನಿರ್ವಹಿಸಬೇಕು ಎಂದು ಕರೆ ನೀಡಿದರು.
ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಿ.ಆರ್. ಪಾಟೀಲ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕಬರಸಾಬ ಬಬರ್ಚಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕಾಧ್ಯಕ್ಷ ಅಶೋಕ ಮಂದಾಲಿ, ಸಿದ್ದು ಪಾಟೀಲ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ ಕೆ.ಆರ್, ಉಪವಿಭಾಗಾಧಿಕಾರಿ, ಗಂಗಪ್ಪ ಎಂ, ತಹಸೀಲ್ದಾರ ಶ್ರೀನಿವಾಸಮೂರ್ತಿ ಕುಲಕರ್ಣಿ, ಜಿ.ಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು, ಗಣ್ಯರು, ಸಾರ್ವಜನಿಕರು, ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬಂಡವಾಳಶಾಹಿಗಳ ಹಿತಾಸಕ್ತಿಯನ್ನು ಕಾಪಾಡುವ ಗುತ್ತಿಗೆದಾರರ ಕೇಂದ್ರೀಕೃತ ವಿಬಿಜಿ ಗ್ರಾಮಜಿ ಯೋಜನೆ ಹೆಸರಿನಲ್ಲಿ ಗ್ರಾಮೀಣ ಹಿತಾಸಕ್ತಿಯನ್ನು ಗಾಳಿಗೆ ತೂರಲಾಗಿದೆ. ಇದರಿಂದಾಗಿ ಗ್ರಾಮೀಣ ಆಸ್ತಿ ಸೃಜನೆಯ ಮೇಲೆ ಮತ್ತು ಕೂಲಿಕಾರರು ಅವರು ಇರುವ ಸ್ಥಳಗಳಲ್ಲಿಯೇ ಉದ್ಯೋಗ ಒದಗಿಸಬೇಕೆಂಬ ಘನವಾದ ಉದಾತ್ತ ಉದ್ದೇಶಗಳಿಗಾಗಿ ಕೇಂದ್ರ ಸರ್ಕಾರಕ್ಕೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾನೂನು ಪುನಃ ಸ್ಥಾಪನೆ ಮಾಡುವಂತೆ ಕರ್ನಾಟಕ ರಾಜ್ಯ ಒತ್ತಾಯಿಸುತ್ತಿದೆ. ಬಡವರ, ಕೃಷಿ ಕಾರ್ಮಿಕರ ಪರವಾದ ಗ್ರಾಮೀಣ ಆಸ್ತಿ ಸೃಜನೆಗೆ ಬಹುದೊಡ್ಡ ಅವಕಾಶ ಕಲ್ಪಿಸುವ, ನಿರುದ್ಯೋಗಿ ಭತ್ಯೆ ಒದಗಿಸುವ, ಕಾರ್ಮಿಕರು ಅವರಿರುವ ಸ್ಥಳದಲ್ಲಿಯೇ ಕೆಲಸ ಒದಗಿಸುವ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾನೂನುನ್ನು ಮರು ಸ್ಥಾಪಿಸಬೇಕೆಂದು ನಮ್ಮ ಸರ್ಕಾರ ಕೇಂದ್ರವನ್ನು ಒತ್ತಾಯಿಸುತ್ತದೆ ಎಂದು ಸಚಿವ ಎಚ್.ಕೆ. ಪಾಟೀಲ ತಿಳಿಸಿದರು.



