ಚೆನ್ನೈ: ತಮಿಳುನಾಡಿನ ಹೊಸೂರಿನಲ್ಲಿರುವ ಟಾಟಾ ಎಲೆಕ್ಟ್ರಾನಿಕ್ಸ್ ಪ್ರೈವೇಟ್ ಲಿಮಿಟೆಡ್ (TEPL) ಕಾರ್ಖಾನೆಯಲ್ಲಿ ಭೀಕರ ದುರಂತ ಸಂಭವಿಸಿದ್ದು, ಮೂವರು ಗುತ್ತಿಗೆ ಕಾರ್ಮಿಕರು ಮೃತಪಟ್ಟಿದ್ದಾರೆ. ಸೋಮವಾರ ಸಂಜೆ ಕಾರ್ಖಾನೆಯ ತ್ಯಾಜ್ಯ ನೀರು ಸಂಗ್ರಹಣಾ ತೊಟ್ಟಿಯನ್ನು ಸ್ವಚ್ಛಗೊಳಿಸುವ ವೇಳೆ ಈ ಘಟನೆ ನಡೆದಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ವಿಷಾನಿಲ ಸೇವನೆಯಿಂದ ಕಾರ್ಮಿಕರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ದುರಂತದಲ್ಲಿ ಮೃತಪಟ್ಟವರನ್ನು ಹೊಸೂರಿನ ನಿವಾಸಿ ಕಾವೇರಿ (30), ಧರ್ಮಪುರಿ ಜಿಲ್ಲೆಯ ಬಿ. ಅಕ್ಮಲ್ (28) ಹಾಗೂ ಎಂ. ಸಾರಥಿ ಕುಮಾರ್ (28) ಎಂದು ಗುರುತಿಸಲಾಗಿದೆ. ಮೂವರೂ ಕಾರ್ಖಾನೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಆಪಲ್ ಐಫೋನ್ಗಳಿಗೆ ಅಗತ್ಯವಿರುವ ಬಿಡಿಭಾಗಗಳನ್ನು ತಯಾರಿಸುವ ಟಾಟಾ ಎಲೆಕ್ಟ್ರಾನಿಕ್ಸ್ ಕಾರ್ಖಾನೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಕಾರ್ಖಾನೆಯ ತ್ಯಾಜ್ಯ ನೀರು ಸಂಗ್ರಹಣಾ ತೊಟ್ಟಿಯಾದ ನ್ಯಾನೋ ಫಿಲ್ಟರ್ ಟ್ಯಾಂಕ್ ಅನ್ನು ಸ್ವಚ್ಛಗೊಳಿಸುವ ಕೆಲಸದಲ್ಲಿ ಕಾರ್ಮಿಕರು ತೊಡಗಿದ್ದರು. ಈ ವೇಳೆ ವಿಷಾನಿಲ ಸೇವಿಸಿ ಮೂವರು ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.
ಘಟನೆಗೆ ಸಂಬಂಧಿಸಿದಂತೆ ತಮಿಳುನಾಡಿನ ಕೈಗಾರಿಕಾ ಸಚಿವೆ ವಿರುಧೈ ಮಗಲ್ ಕೀರ್ತನಾ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕಾರ್ಮಿಕರ ಸಾವಿನ ಕುರಿತು ಸಮಗ್ರ ತನಿಖೆ ನಡೆಸುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೆ, ಮೃತ ಕಾರ್ಮಿಕರ ಕುಟುಂಬಗಳಿಗೆ ಅಗತ್ಯವಿರುವ ಎಲ್ಲ ರೀತಿಯ ನೆರವು ಒದಗಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.
ದುರಂತಕ್ಕೆ ಸಂಬಂಧಿಸಿದ ವಿಚಾರವನ್ನು ತುರ್ತಾಗಿ ನಿರ್ವಹಿಸುವಂತೆಯೂ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಕಾರ್ಮಿಕರ ಸಾವಿಗೆ ನಿಖರ ಕಾರಣವೇನು ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.








