ಪಂಜಾಬ್: ಫತೇಘರ್ ಸಾಹಿಬ್ ಜಿಲ್ಲೆಯಲ್ಲಿ ಭಕ್ತರನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ದುರಂತದಲ್ಲಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, 21 ಮಂದಿ ಗಾಯಗೊಂಡಿದ್ದಾರೆ.
ಈ ಘಟನೆ ಬಸ್ಸಿ ಪಠಾಣಾ ಪ್ರದೇಶದ ಮೊರಿಂಡಾ-ಚುನ್ನಿ ರಸ್ತೆಯ ಹಿಮ್ಮತ್‌ಪುರ ಗ್ರಾಮದ ಬಳಿ ಮಂಗಳವಾರ ರಾತ್ರಿ ಸುಮಾರು 10 ಗಂಟೆಗೆ ನಡೆದಿದೆ. ಬೈಸಾಖಿ ಹಬ್ಬದ ಅಂಗವಾಗಿ ಆನಂದಪುರ ಸಾಹಿಬ್ ಗೆ ತೆರಳಿ ಪೂಜೆ ಸಲ್ಲಿಸಿ ವಾಪಸ್ ಆಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.
ಮಾಹಿತಿ ತಿಳಿದ ತಕ್ಷಣ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ತುರ್ತು ರಕ್ಷಣಾ ಕಾರ್ಯಾಚರಣೆ ನಡೆಸಿದರು. ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪೊಲೀಸರ ಮಾಹಿತಿ ಪ್ರಕಾರ, ಬಸ್ ಅತಿವೇಗದಿಂದ ಸಾಗುತ್ತಿದ್ದಾಗ ನಿಯಂತ್ರಣ ತಪ್ಪಿ ರಸ್ತೆ ಬಿಟ್ಟು ಪಕ್ಕಕ್ಕೆ ಉರುಳಿ ಬಿದ್ದಿದೆ. ಮೃತರಲ್ಲಿ ಒಬ್ಬ ಮಹಿಳೆ ಸೇರಿದ್ದು, ಎಲ್ಲಾ ಪ್ರಯಾಣಿಕರು ಫತೇಘರ್ ಸಾಹಿಬ್ ಜಿಲ್ಲೆಯ ಮೈನ್ ಮಜ್ರಿ ಗ್ರಾಮದವರಾಗಿದ್ದಾರೆ.
ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.



