ಮಂಡ್ಯ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಹೆಬ್ಬಾಡಿಹುಂಡಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ರಾಜಸ್ಥಾನ ಮೂಲದ ಸವಾಲ್ ಸಿಂಗ್ ಮತ್ತು ಗಿರಿಧರ್ ಎಂದು ಗುರುತಿಸಲಾಗಿದೆ. ಇಬ್ಬರೂ ಮಹದೇವಪುರ ಸಮೀಪದ ಹಾರ್ಸ್ ರೈಡಿಂಗ್ ಅಡ್ವೆಂಚರ್ಸ್‌ನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ನಾಲ್ವರು ಸ್ನೇಹಿತರೊಂದಿಗೆ ಹೆಬ್ಬಾಡಿಹುಂಡಿ ಗ್ರಾಮದ ಕೆರೆಗೆ ಈಜಲು ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಈ ವೇಳೆ ಇಬ್ಬರು ಯುವಕರು ನೀರಿನಲ್ಲಿ ಮುಳುಗಿದ್ದಾರೆ.
ಮಾಹಿತಿ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ತೆರಳಿ ಶವಗಳಿಗಾಗಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಕಾರ್ಯಾಚರಣೆ ಬಳಿಕ ಇಬ್ಬರು ಯುವಕರ ಮೃತದೇಹಗಳನ್ನು ಕೆರೆಯಿಂದ ಹೊರತೆಗೆದಿದ್ದಾರೆ.
ಘಟನೆ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.



