ರಾಯಚೂರು: ಕೃಷ್ಣಾ ನದಿಯಲ್ಲಿ ಈಜಲು ತೆರಳಿದ್ದ ಯುವಕನೊಬ್ಬ ನೀರುಪಾಲಾಗಿ ಮೃತಪಟ್ಟಿರುವ ಘಟನೆ ರಾಯಚೂರು ತಾಲೂಕಿನ ದೇವಸುಗೂರು ಬಳಿ ನಡೆದಿದೆ.
ಜಾರ್ಖಂಡ್ ಮೂಲದ 20 ವರ್ಷದ ಸುನಿಲ್ ಪಹಾಡಿಯಾ ಮೃತ ಯುವಕ. ಖಾಸಗಿ ಫಾರ್ಮಾ ಕಂಪನಿಯಲ್ಲಿ ಸಹಾಯಕನಾಗಿ ಕೆಲಸ ಮಾಡುತ್ತಿದ್ದ ಸುನಿಲ್, ಸ್ನೇಹಿತನೊಂದಿಗೆ ಕೃಷ್ಣಾ ನದಿ ಸೇತುವೆ ಬಳಿ ಈಜಲು ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಹಾಗೂ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ತೆರಳಿ ಕಾರ್ಯಾಚರಣೆ ನಡೆಸಿದ್ದಾರೆ. ಬಳಿಕ ನದಿಯಿಂದ ಯುವಕನ ಶವವನ್ನು ಹೊರತೆಗೆದು, ಮರಣೋತ್ತರ ಪರೀಕ್ಷೆಗಾಗಿ ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ಶಕ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.



