ಮುಂಬೈ: ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಐಷಾರಾಮಿ ಬಸ್ ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದು ಸುಮಾರು 20 ಅಡಿ ಆಳದ ಕಂದಕಕ್ಕೆ ಬಿದ್ದಿದೆ. ಘಟನೆಯಲ್ಲಿ ಓರ್ವ ಮಹಿಳೆ ಮೃತಪಟ್ಟಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳ ಪೈಕಿ ಒಬ್ಬರ ಸ್ಥಿತಿ ಗಂಭೀರವಾಗಿದೆ.

26 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಪುಣೆಯಿಂದ ನಾಗ್ಪುರಕ್ಕೆ ತೆರಳುತ್ತಿತ್ತು. ಈ ವೇಳೆ ಕೇಂಬ್ರಿಡ್ಜ್ ಚೌಕ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದು ಕೆಳಕ್ಕೆ ಉರುಳಿದೆ. ಅಪಘಾತದ ತೀವ್ರತೆಗೆ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡವರಲ್ಲಿ ಮಕ್ಕಳು ಮತ್ತು ಮಹಿಳೆಯರೂ ಸೇರಿದ್ದಾರೆ.
ಅಪಘಾತದ ಬಳಿಕ ಬಸ್ನ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ಸ್ಥಳೀಯ ನಿವಾಸಿಗಳು ಹಾಗೂ ರಕ್ಷಣಾ ತಂಡಗಳು ಹೊರತೆಗೆದಿವೆ. ಗಾಯಾಳುಗಳನ್ನು ತಕ್ಷಣವೇ ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.









