ನೆಲಮಂಗಲ:- ಯುಗಾದಿ ಹಬ್ಬದಂದೇ ನಿಗೂಢ ಸ್ಫೋಟ ಸಂಭವಿಸಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಚಂದನ ಹೊಸಹಳ್ಳಿ ಗ್ರಾಮದ ಮನೆಯೊಂದರಲ್ಲಿ ಜರುಗಿದೆ.
ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಉತ್ತರ ಪ್ರದೇಶ ಮೂಲದ ಅಭಿನಂದನ್ ಶರ್ಮಾ, ಅಭಿಷೇಕ್ ಶರ್ಮಾ ಹಾಗೂ ರಾಮ್ ಭಚನ್ ಶರ್ಮಾ ಎಂದು ಗುರುತಿಸಲಾಗಿದೆ. ಈ ಮೂವರು ಸೋಂಪುರ ಕೈಗಾರಿಕಾ ಪ್ರದೇಶದ ಮಾರುತಿ ಸುಜುಕಿ ಕಂಪನಿಯಲ್ಲಿ ಸೆಕ್ಯೂರಿಟಿಯಾಗಿ ಕೆಲಸ ನಿರ್ವಹಿಸುತ್ತಿದ್ದರು.
ಮೆಲ್ನೋಟಕ್ಕೆ ಅಡುಗೆ ಅನಿಲ ಸೋರಿಕೆಯಾಗಿ ಸ್ಫೋಟ ಸಂಭವಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಬೆನ್ನಲ್ಲೇ ಸ್ಥಳಕ್ಕೆ ಡಾಬಸ್ ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ.



