ಬಳ್ಳಾರಿ: ದೇವಸ್ಥಾನಕ್ಕೆ ತೆರಳಿ ವಾಪಸಾಗುವ ಮಾರ್ಗಮಧ್ಯೆ ಅಜ್ಜಿಯ ಮನೆಯಲ್ಲಿ ಉಳಿದುಕೊಂಡಿದ್ದ ಇಬ್ಬರು ಬಾಲಕರು ಕಾಲುವೆಯಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಬುಕ್ಕಸಾಗರ ಗ್ರಾಮದ ಬಳಿ ನಡೆದಿದೆ.
ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಎಚ್. ವೀರಾಪುರ ಗ್ರಾಮದ ಸತೀಶ್ (16) ಮತ್ತು ಫಕ್ಕೀರಪ್ಪ (12) ಮೃತಪಟ್ಟ ಬಾಲಕರು.
ಇಬ್ಬರೂ ಕೊಪ್ಪಳ ಜಿಲ್ಲೆಯ ಹುಲಿಗಿ ಗ್ರಾಮದ ಪ್ರಸಿದ್ಧ ಶ್ರೀ ಹುಲಿಗೆಮ್ಮ ದೇವಸ್ಥಾನಕ್ಕೆ ದರ್ಶನಕ್ಕಾಗಿ ತೆರಳಿದ್ದರು. ದೇವರ ದರ್ಶನ ಮುಗಿಸಿ ಊರಿಗೆ ವಾಪಸಾಗುವ ವೇಳೆ ಹೊಸಪೇಟೆ ತಾಲೂಕಿನ ಬುಕ್ಕಸಾಗರದಲ್ಲಿರುವ ಅಜ್ಜಿಯ ಮನೆಯಲ್ಲಿ ತಂಗಿದ್ದರು.
ಈ ಸಂದರ್ಭದಲ್ಲಿ ಗ್ರಾಮದ ಸಮೀಪದ ಕಾಲುವೆಯಲ್ಲಿ ಈಜಾಡಲು ಇಬ್ಬರೂ ಬಾಲಕರು ತೆರಳಿದ್ದಾರೆ. ಆದರೆ ಕಾಲುವೆಯ ನೀರಿನ ಆಳ ಮತ್ತು ಹರಿವಿನ ಬಗ್ಗೆ ಸರಿಯಾದ ಅಂದಾಜಿಲ್ಲದೆ ನೀರಿಗೆ ಇಳಿದಿದ್ದಾರೆ. ಇಬ್ಬರಿಗೂ ಸರಿಯಾಗಿ ಈಜು ಬಾರದ ಕಾರಣ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ವಿಷಯ ತಿಳಿದ ಸ್ಥಳೀಯರು ತಕ್ಷಣ ಕಾಲುವೆಯಲ್ಲಿ ಶೋಧ ನಡೆಸಿ ಇಬ್ಬರು ಬಾಲಕರ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಮಕ್ಕಳನ್ನು ಕಳೆದುಕೊಂಡ ಪೋಷಕರು ಹಾಗೂ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.
ಘಟನೆಗೆ ಸಂಬಂಧಿಸಿದಂತೆ ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.









