ಕೊಪ್ಪಳ: ಜಿಲ್ಲೆಯ ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ ತುಂಗಭದ್ರಾ ಸೇತುವೆ ಮೇಲೆ ಶುಕ್ರವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಹತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಹುಲಿಗೆಮ್ಮ ಜಾತ್ರೆ ಮುಗಿಸಿಕೊಂಡು ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಮರ್ಲಾಯನಹಳ್ಳಿ ಗ್ರಾಮಕ್ಕೆ ಮರಳುತ್ತಿದ್ದ ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.
ಡಿಕ್ಕಿಯ ತೀವ್ರತೆಗೆ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ತುಂಗಭದ್ರಾ ಸೇತುವೆಯಿಂದ ಕೆಳಕ್ಕೆ ಬಿದ್ದಿದೆ. ಅಪಘಾತದಲ್ಲಿ ಕೆಂಚಪ್ಪ (35), ಮಹಾಂತೇಶ್ (18), ಭರತ್ (1), ಸವಿತಾ (12), ಮಾರೇಶ್ ಹಾಗೂ ಗೌರಮ್ಮ ಮೃತಪಟ್ಟಿದ್ದಾರೆ.
ಗಂಭೀರವಾಗಿ ಗಾಯಗೊಂಡಿರುವ ಹತ್ತಕ್ಕೂ ಹೆಚ್ಚು ಮಂದಿಯನ್ನು ಹೊಸಪೇಟೆ ಹಾಗೂ ಕೊಪ್ಪಳ ಜಿಲ್ಲಾಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಕೆಲವರ ಸ್ಥಿತಿ ಚಿಂತಾಜನಕವಾಗಿರುವ ಹಿನ್ನೆಲೆ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.
ಅಪಘಾತದ ನಂತರ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮುನಿರಾಬಾದ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.



