ಡೆಹ್ರಾಡೂನ್: ಉತ್ತರಾಖಂಡದ ಬದರಿನಾಥ ಧಾಮದಿಂದ ಫಾಟ್ ಕಡೆಗೆ ತೆರಳುತ್ತಿದ್ದ ಹೆಲಿಕಾಪ್ಟರ್ ಜೋಶಿಮಠ ಸಮೀಪ ಪತನಗೊಂಡಿದ್ದು, ಕರ್ನಾಟಕದ ಐವರು ಸೇರಿದಂತೆ ಒಟ್ಟು ಆರು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಈ ದುರಂತದಲ್ಲಿ ತುಮಕೂರು ಜಿಲ್ಲೆಯ ಹುಲಿಯೂರುದುರ್ಗದ ವಿದ್ಯಾಭಾರತಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಎಚ್.ಎನ್. ನಟರಾಜು ಕೂಡ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ತುಮಕೂರು ಜಿಲ್ಲೆಯ ಹುಲಿಯೂರುದುರ್ಗದ ನಿವಾಸಿಯಾಗಿದ್ದ ಎಚ್.ಎನ್. ನಟರಾಜು ಅವರು ವಿದ್ಯಾಭಾರತಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದರು. ನಾಲ್ಕು ದಿನಗಳ ಹಿಂದೆ ಐವರು ಸ್ನೇಹಿತರೊಂದಿಗೆ ಉತ್ತರಾಖಂಡ ಪ್ರವಾಸಕ್ಕೆ ತೆರಳಿದ್ದರು ಎನ್ನಲಾಗಿದೆ. ಬದರಿನಾಥ ಧಾಮದ ದರ್ಶನ ಮುಗಿಸಿ ಹೆಲಿಕಾಪ್ಟರ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ ಎಂದು ವರದಿಯಾಗಿದೆ.
ಉತ್ತರಾಖಂಡದ ಚಮೋಲಿ ಜಿಲ್ಲೆಯ ಜೋಶಿಮಠ ಸಮೀಪದ ಚಾಯೀ ಗ್ರಾಮದ ಬಳಿ ಹೆಲಿಕಾಪ್ಟರ್ ಪತನಗೊಂಡಿದೆ ಎನ್ನಲಾಗಿದೆ. ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯ ಜಿಲ್ಲಾಡಳಿತ, ವಿಪತ್ತು ನಿರ್ವಹಣಾ ಇಲಾಖೆ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.
ಘಟನೆಯ ಕುರಿತು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಪ್ರತಿಕ್ರಿಯಿಸಿದ್ದು, ಜೋಶಿಮಠ ಸಮೀಪದ ಚಾಯೀ ಗ್ರಾಮದ ಬಳಿ ಸಂಭವಿಸಿರುವ ಹೆಲಿಕಾಪ್ಟರ್ ಅಪಘಾತ ಅತ್ಯಂತ ದುರದೃಷ್ಟಕರ ಎಂದು ಹೇಳಿದ್ದಾರೆ. ಘಟನೆ ಕುರಿತು ಮಾಹಿತಿ ಪಡೆದಿದ್ದು, ಜಿಲ್ಲಾಡಳಿತ, ವಿಪತ್ತು ನಿರ್ವಹಣಾ ಇಲಾಖೆ ಹಾಗೂ ಎಸ್ಡಿಆರ್ಎಫ್ ಸಿಬ್ಬಂದಿ ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಅಪಘಾತದ ಬಳಿಕ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿರುವುದಾಗಿ ಮುಖ್ಯಮಂತ್ರಿ ಧಾಮಿ ತಿಳಿಸಿದ್ದಾರೆ. ಗಂಭೀರವಾಗಿ ಗಾಯಗೊಂಡವರನ್ನು ಉತ್ತಮ ಚಿಕಿತ್ಸೆಗಾಗಿ ತಕ್ಷಣವೇ ಹೆಲಿಕಾಪ್ಟರ್ ಮೂಲಕ ಸ್ಥಳಾಂತರಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪ್ರಯಾಣಿಕರ ಸುರಕ್ಷತೆಗಾಗಿ ದೇವರಲ್ಲಿ ಪ್ರಾರ್ಥಿಸುವುದಾಗಿ ಹೇಳಿದ್ದಾರೆ.








