ಉಡುಪಿ: ಕೈಗಳನ್ನು ಪರಸ್ಪರ ಶಾಲಿನಿಂದ ಕಟ್ಟಿಕೊಂಡು ಪತಿ-ಪತ್ನಿ ಸೀತಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಉಡುಪಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66ರ ಮಾಬುಕಳ ಸೇತುವೆ ಬಳಿ ನಡೆದಿದೆ.

ಮೃತರನ್ನು ಮೂಲತಃ ತುಮಕೂರು ಜಿಲ್ಲೆಯವರಾದ ಶ್ರೀನಿವಾಸ್ ಮೂರ್ತಿ ಹೆಚ್. (52) ಹಾಗೂ ಗಂಗಾ (48) ಎಂದು ಗುರುತಿಸಲಾಗಿದೆ. ದಂಪತಿ ನದಿಗೆ ಹಾರುವುದನ್ನು ಗಮನಿಸಿದ ರಿಕ್ಷಾ ಚಾಲಕರೊಬ್ಬರು ತಕ್ಷಣ ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ಪರಿಶೀಲಿಸಿದಾಗ ದಂಪತಿ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿರುವುದು ತಿಳಿದುಬಂದಿದೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ನದಿಯಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಆರಂಭದಲ್ಲಿ ದಂಪತಿಯ ಸುಳಿವು ಸಿಗದಿದ್ದರೂ, ಬಳಿಕ ಮಾಬುಕಳ ಸೇತುವೆಯಿಂದ ಸುಮಾರು 500 ಮೀಟರ್ ದೂರದ ಪಾಂಡೇಶ್ವರದ ಸೀತಾ ನದಿಯಲ್ಲಿ ಇಬ್ಬರ ಮೃತದೇಹಗಳು ಪತ್ತೆಯಾಗಿವೆ.
ಆತ್ಮಹತ್ಯೆಗೂ ಮುನ್ನ ದಂಪತಿ ಚೂಡಿದಾರದ ಶಾಲಿನಿಂದ ತಮ್ಮ ಕೈಗಳನ್ನು ಪರಸ್ಪರ ಕಟ್ಟಿಕೊಂಡಿದ್ದರು ಎನ್ನಲಾಗಿದ್ದು, ಅದೇ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿವೆ.
ಘಟನಾ ಸ್ಥಳಕ್ಕೆ ಕೋಟ ಪೊಲೀಸ್ ಠಾಣೆಯ ಉಪನಿರೀಕ್ಷಕ ಪ್ರವೀಣ್ ಕುಮಾರ್ ಆರ್. ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದಂಪತಿಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಕೋಟ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.









