ಬೆಂಗಳೂರು: ನಗರದ ಕಾಟನ್ಪೇಟೆಯ ಮಸ್ತಾನ್ ದರ್ಗಾ ಬಳಿಯ ಲಾಡ್ಜ್ವೊಂದರಲ್ಲಿ ನರ್ಸಿಂಗ್ ವಿದ್ಯಾರ್ಥಿನಿಯನ್ನು ಆಕೆಯ ಪ್ರಿಯಕರನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಕೊಲೆಯಾದ ಯುವತಿಯನ್ನು ಕೇರಳದ ಆಡೂರು ಮೂಲದ ಗಂಗಾ ಎಂದು ಗುರುತಿಸಲಾಗಿದ್ದು, ಆರೋಪಿ ಗೋಕುಲ್ ಕೃಷ್ಣನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಮೃತ ಗಂಗಾ ಮತ್ತು ಆರೋಪಿ ಗೋಕುಲ್ ಕೃಷ್ಣ ಇಬ್ಬರೂ ಕೇರಳದ ಆಡೂರು ಮೂಲದವರಾಗಿದ್ದು, ಕಳೆದ ನಾಲ್ಕು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಕೊಲೆಗೆ ಮುನ್ನ ಆರೋಪಿ ಚಾಕುವನ್ನು ಖರೀದಿಸಿದ್ದ ಎಂಬ ಮಾಹಿತಿ ಲಭ್ಯವಾಗಿದೆ.
ನವೆಂಬರ್ 27ರ ಬೆಳಿಗ್ಗೆ ಸುಮಾರು 10 ಗಂಟೆಗೆ ಇಬ್ಬರ ನಡುವೆ ಲಾಡ್ಜ್ನಲ್ಲಿ ಜಗಳ ಆರಂಭವಾಗಿದೆ. ಮಾತಿನ ಚಕಮಕಿ ತಾರಕಕ್ಕೇರಿದ ಸಂದರ್ಭದಲ್ಲಿ ಆರೋಪಿ ಚಾಕುವಿನಿಂದ ಗಂಗಾಗೆ ಇರಿದು ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.
ಘಟನೆ ತಿಳಿಯುತ್ತಿದ್ದಂತೆ ಕಾಟನ್ಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದು, ಕೊಲೆಗೆ ನಿಖರ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ. ಪೊಲೀಸರು ಪ್ರಕರಣದ ಕುರಿತು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.









