ಹಾಸನ: ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರೊಬ್ಬರು ಮೃತಪಟ್ಟ ದುರ್ಘಟನೆ ಅರಕಲಗೂಡು ತಾಲೂಕಿನ ಕೆಬ್ಬೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಕೇರಳಾಪುರ ಗ್ರಾಮದ ಸತೀಶ್ (53) ಎಂದು ಗುರುತಿಸಲಾಗಿದೆ. ಅವರು ಕೆಬ್ಬೆಕೊಪ್ಪಲು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಪಾಠ ಹೇಳುತ್ತಿದ್ದ ವೇಳೆ ಸತೀಶ್ ಏಕಾಏಕಿ ಅಸ್ವಸ್ಥಗೊಂಡು ತರಗತಿ ಕೊಠಡಿಯಲ್ಲೇ ಕುಸಿದು ಬಿದ್ದಿದ್ದಾರೆ.
ಘಟನೆ ಗಮನಿಸಿದ ವಿದ್ಯಾರ್ಥಿಗಳು ಹಾಗೂ ಸಹ ಶಿಕ್ಷಕರು ತಕ್ಷಣವೇ ನೆರವಿಗೆ ಧಾವಿಸಿ ಅಂಬ್ಯುಲೆನ್ಸ್‌ಗೆ ಕರೆ ಮಾಡಿದ್ದಾರೆ. ಆದರೆ ತೀವ್ರ ಹೃದಯಾಘಾತದಿಂದಾಗಿ ಅವರು ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.
ಶಿಕ್ಷಕರ ಅಕಾಲಿಕ ನಿಧನದಿಂದ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕಣ್ಣೀರಿಟ್ಟಿದ್ದಾರೆ. ಶಿಕ್ಷಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿ, ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದ್ದಾರೆ.



