ವಿಜಯನಗರ: ವಿದ್ಯುತ್ ಟ್ರಾನ್ಸ್ಫಾರ್ಮರ್ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಮಾರುಕಟ್ಟೆಯಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾದ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪಟ್ಟಣದ ಬಸವೇಶ್ವರ ಬಜಾರ್ನಲ್ಲಿ ಸೋಮವಾರ ನಡೆದಿದೆ.

ಪಟ್ಟಣದ ತರಕಾರಿ ಮಾರುಕಟ್ಟೆ ರಸ್ತೆಯಲ್ಲಿ ಅಳವಡಿಸಲಾಗಿದ್ದ 63 ಕೆ.ವಿ. ಸಾಮರ್ಥ್ಯದ ವಿದ್ಯುತ್ ಟ್ರಾನ್ಸ್ಫಾರ್ಮರ್ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಪರಿಣಾಮ ಕ್ಷಣಾರ್ಧದಲ್ಲೇ ಟ್ರಾನ್ಸ್ಫಾರ್ಮರ್ಗೆ ಬೆಂಕಿ ಹೊತ್ತಿಕೊಂಡು ಧಗಧಗನೆ ಉರಿದಿದೆ.
ಘಟನೆ ನಡೆದ ಸಂದರ್ಭದಲ್ಲಿ ನೂರಾರು ಜನರು ಹಬ್ಬದ ಖರೀದಿಯಲ್ಲಿ ತೊಡಗಿದ್ದರು. ಟ್ರಾನ್ಸ್ಫಾರ್ಮರ್ನಿಂದ ಭಾರಿ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ, ಅದು ಸ್ಫೋಟಗೊಳ್ಳಬಹುದು ಎಂಬ ಭಯದಿಂದ ಜನರು ಸ್ಥಳದಿಂದ ಓಡಿಹೋಗಿದ್ದಾರೆ. ಕೆಲವರು ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಜೆಸ್ಕಾಂ ಎಂಜಿನಿಯರ್ ಚಂದ್ರಮೋಹನ್, ಟ್ರಾನ್ಸ್ಫಾರ್ಮರ್ನಲ್ಲಿದ್ದ ಆಯಿಲ್ ಖಾಲಿಯಾಗಿದ್ದು, ಒಳಗಿನ ವೈಂಡಿಂಗ್ ಅತಿಯಾಗಿ ಬಿಸಿಯಾಗಿದ್ದರಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿಸಿದ್ದಾರೆ. ಸದ್ಯ ಸುಟ್ಟುಹೋದ ಟ್ರಾನ್ಸ್ಫಾರ್ಮರ್ ಬದಲಿಗೆ ಹೊಸ ಟ್ರಾನ್ಸ್ಫಾರ್ಮರ್ ಅಳವಡಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.










