ಕಲಬುರಗಿ: ಜೇವರ್ಗಿ ತಾಲೂಕಿನ ಮದರಿ ಗ್ರಾಮದ ಬಳಿ ಚಲಿಸುತ್ತಿದ್ದ ಸರ್ಕಾರಿ ಸಾರಿಗೆ ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದ್ದು, ಭಾರೀ ಅನಾಹುತ ಕೂದಲೆಳೆಯ ಅಂತರದಲ್ಲಿ ತಪ್ಪಿದೆ.
ಮದರಿ ಗ್ರಾಮದಿಂದ ಜೇವರ್ಗಿಗೆ ತೆರಳುತ್ತಿದ್ದ ವೇಳೆ ಬಸ್‌ನ ಇಂಜಿನ್ ಭಾಗದಲ್ಲಿ ಅಚಾನಕ್ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಕಾಣಿಸುತ್ತಿದ್ದಂತೆ ಚಾಲಕ ತಕ್ಷಣವೇ ಬಸ್ ನಿಲ್ಲಿಸಿ, ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾನೆ. ಚಾಲಕನ ಸಮಯಪ್ರಜ್ಞೆಯಿಂದ ದೊಡ್ಡ ದುರಂತ ತಪ್ಪಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ ಶಾರ್ಟ್ ಸರ್ಕ್ಯೂಟ್‌ನಿಂದ ಬಸ್‌ಗೆ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದೆ. ಬೆಂಕಿ ಕಾಣುತ್ತಿದ್ದಂತೆಯೇ ಸ್ಥಳೀಯರು ನೀರು ಸುರಿದು ಬೆಂಕಿಯನ್ನು ನಂದಿಸಿದ್ದಾರೆ. ಆದರೆ ದಟ್ಟ ಹೊಗೆ ಆವರಿಸಿದ್ದರಿಂದ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಈ ಬಸ್ ಜೇವರ್ಗಿ ಡಿಪೋಗೆ ಸೇರಿದ ಸಾರಿಗೆ ಬಸ್ ಆಗಿದ್ದು, ಘಟನೆ ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



