ದೇವನಹಳ್ಳಿ: ದೊಡ್ಡಬಳ್ಳಾಪುರದಲ್ಲಿ ಹೆಲ್ಮೆಟ್ ಧರಿಸದೇ ತ್ರಿಬಲ್ ರೈಡ್ ಮಾಡಿಕೊಂಡು ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡವರಿಗೆ ಪೊಲೀಸರೇ ಶಾಕ್ ನೀಡಿದ್ದಾರೆ.
ಬೈಕ್ ಮೇಲೆ ಮೂವರು ಸೇರಿ ‘ಹುಲಿ ಹುಲಿ’ ಹಾಡಿಗೆ ರೀಲ್ಸ್ ಮಾಡಿದ್ದ ಪ್ರಕರಣದಲ್ಲಿ ರೀಲ್ಸ್ ಮಂಜು, ಗಂಗಾರಂಗ ಮತ್ತು ಸವಿತಾ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಹೆಲ್ಮೆಟ್ ಧರಿಸದೇ ಸಂಚರಿಸಿದ್ದಲ್ಲದೇ, ಒಂದೇ ಬೈಕ್‌ನಲ್ಲಿ ಮೂವರು ಪ್ರಯಾಣಿಸಿ ಸಂಚಾರ ನಿಯಮ ಉಲ್ಲಂಘಿಸಿದ್ದ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ರೀಲ್ಸ್ ಮಂಜುವನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದರು. ಬಳಿಕ ನಿಯಮ ಉಲ್ಲಂಘನೆ ಸಂಬಂಧ ಒಂದು ಸಾವಿರ ರೂಪಾಯಿ ದಂಡ ವಿಧಿಸಿ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು.
ಮುಂದಿನ ದಿನಗಳಲ್ಲಿ ಟ್ರಾಫಿಕ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸಾಮಾಜಿಕ ಜಾಲತಾಣಕ್ಕಾಗಿ ಜೀವಕ್ಕೆ ಅಪಾಯ ಉಂಟುಮಾಡುವ ರೀತಿಯಲ್ಲಿ ರೀಲ್ಸ್ ಮಾಡಬಾರದು ಎಂದು ಪೊಲೀಸರು ಸೂಚಿಸಿದ್ದಾರೆ.
ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.



