ಅಗರ್ತಲಾ: ತ್ರಿಪುರಾ ರಾಜ್ಯದ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಅನುರಾಗ್ ಧನಕರ್ ಅವರು ಅಗರ್ತಲಾದಲ್ಲಿರುವ ರಾಜ್ಯ ಪೊಲೀಸ್ ಪ್ರಧಾನ ಕಚೇರಿಯ ತಮ್ಮ ಚೇಂಬರ್ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಈ ಘಟನೆ ಇಡೀ ಪೊಲೀಸ್ ಇಲಾಖೆಯಲ್ಲಿ ತೀವ್ರ ಆಘಾತ ಮೂಡಿಸಿದೆ.
ಮಾಹಿತಿಯ ಪ್ರಕಾರ, ಡಿಜಿಪಿ ಅನುರಾಗ್ ಧನಕರ್ ಅವರು ಇಂದು ಬೆಳಿಗ್ಗೆ ಎಂದಿನಂತೆ ತಮ್ಮ ಕಚೇರಿಗೆ ಆಗಮಿಸಿದ್ದರು. ಕೆಲ ಸಮಯದ ಬಳಿಕ ಅವರ ಚೇಂಬರ್ನಿಂದ ಗುಂಡಿನ ಸದ್ದು ಕೇಳಿಬಂದಿದೆ. ಕೂಡಲೇ ಸಿಬ್ಬಂದಿ ಒಳಗೆ ತೆರಳಿ ನೋಡಿದಾಗ, ಅವರು ತೀವ್ರ ರಕ್ತಸ್ರಾವದಿಂದ ಕುಸಿದು ಬಿದ್ದಿರುವುದು ಕಂಡುಬಂದಿದೆ.
ಧನಕರ್ ಅವರು ತಮ್ಮ ಸೇವಾ ಪಿಸ್ತೂಲ್ ಬಳಸಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ. ತಕ್ಷಣ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.
ಘಟನೆ ತಿಳಿಯುತ್ತಿದ್ದಂತೆಯೇ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ವಿಧಿವಿಜ್ಞಾನ ತಜ್ಞರ ತಂಡ ರಾಜ್ಯ ಪೊಲೀಸ್ ಪ್ರಧಾನ ಕಚೇರಿಗೆ ಆಗಮಿಸಿ ಪರಿಶೀಲನೆ ನಡೆಸುತ್ತಿದೆ. ಡಿಜಿಪಿ ಅವರ ಸಾವಿಗೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಆರಂಭಿಸಲಾಗಿದೆ.
ಅವರು ಈ ರೀತಿಯ ತೀವ್ರ ನಿರ್ಧಾರ ಕೈಗೊಳ್ಳಲು ಯಾವುದೇ ವೈಯಕ್ತಿಕ ಅಥವಾ ವೃತ್ತಿಪರ ಒತ್ತಡಗಳು ಕಾರಣವಾಗಿದ್ದವೇ ಎಂಬ ಬಗ್ಗೆಯೂ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.
ಅನುರಾಗ್ ಧನಕರ್ ಅವರು ಈ ಹಿಂದೆ ಹಲವು ಪ್ರಮುಖ ತನಿಖೆಗಳಲ್ಲಿ ಭಾಗಿಯಾಗಿದ್ದ ಹಿರಿಯ ಪೊಲೀಸ್ ಅಧಿಕಾರಿ ಆಗಿದ್ದರು. 1984ರ ಸಿಖ್ ಸಮುದಾಯದ ಹತ್ಯಾಕಾಂಡ ಪ್ರಕರಣದ ತನಿಖೆಗಾಗಿ ರಚಿಸಲಾಗಿದ್ದ ವಿಶೇಷ ತನಿಖಾ ತಂಡವನ್ನು (ಎಸ್ಐಟಿ) ಮುನ್ನಡೆಸಿದ್ದರು. ಅಲ್ಲದೆ, ಸಿಬಿಐನಲ್ಲಿ ಕಾರ್ಯನಿರ್ವಹಿಸುವ ವೇಳೆ ಉದ್ಯಮಿ ನೀರವ್ ಮೋದಿ ಪ್ರಕರಣದ ತನಿಖೆಯ ಜವಾಬ್ದಾರಿಯನ್ನೂ ವಹಿಸಿದ್ದರು.



