ಕೊಪ್ಪಳ: ಜಿಲ್ಲೆಯ ಹೊರವಲಯದ ಚುಕ್ಕನಕಲ್ ಬಳಿ ಶುಕ್ರವಾರ ಬೆಳಗಿನ ಜಾವ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಚಲಿಸುತ್ತಿದ್ದ ಟಿಟಿ (ಟೆಂಪೋ ಟ್ರಾವೆಲರ್) ವಾಹನದ ಟೈರ್ ದಿಢೀರ್ ಬ್ಲಾಸ್ಟ್ ಆದ ಪರಿಣಾಮ ವಾಹನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾಗಿದೆ.
ಅಪಘಾತದಲ್ಲಿ ವಾಹನದಲ್ಲಿದ್ದ 12 ಪ್ರಯಾಣಿಕರು ಗಾಯಗೊಂಡಿದ್ದು, ಇವರಲ್ಲಿ 2 ವರ್ಷದ ಮಗುವಿನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ತಕ್ಷಣವೇ ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಹೈದರಾಬಾದ್‌ನಿಂದ ಗೋವಾ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ಹಾಗೂ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿ, ವಾಹನದಲ್ಲಿದ್ದವರನ್ನು ಹೊರತೆಗೆದರು.
ಘಟನಾ ಸ್ಥಳಕ್ಕೆ ಕೊಪ್ಪಳ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.



