ಬೆಂಗಳೂರು: ತುಮಕೂರಿನಲ್ಲಿ ನಡೆದ ಲಾಕಪ್ ಡೆತ್ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, “ನಿನ್ನೆ ವಿಚಾರಣೆ ನಡೆಯುವ ಸಂದರ್ಭದಲ್ಲೇ ವ್ಯಕ್ತಿ ಮೃತಪಟ್ಟಿದ್ದಾನೆ. ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಆದ್ದರಿಂದ ಸಿಐಡಿ ತನಿಖೆಗೆ ಆದೇಶಿಸಲಾಗಿದೆ,” ಎಂದು ಹೇಳಿದರು.
ಕುಟುಂಬಸ್ಥರು ಪೊಲೀಸರ ಹಲ್ಲೆಯಿಂದಲೇ ಸಾವು ಸಂಭವಿಸಿದೆ ಎಂದು ಆರೋಪಿಸಿರುವ ಕುರಿತು ಪ್ರತಿಕ್ರಿಯಿಸಿದ ಸಚಿವರು, “ಸಿಐಡಿ ತನಿಖೆಯಲ್ಲಿ ಸತ್ಯಾಸತ್ಯತೆ ಹೊರಬರುತ್ತದೆ. ಮರಣೋತ್ತರ ಪರೀಕ್ಷೆಯಲ್ಲೂ ಸ್ಪಷ್ಟತೆ ಸಿಗಲಿದೆ,” ಎಂದು ತಿಳಿಸಿದ್ದಾರೆ.
“ತನಿಖೆಯ ವರದಿ ಆಧರಿಸಿ, ಯಾರಾದರೂ ತಪ್ಪಿತಸ್ಥರಾಗಿದ್ದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ,” ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.



