ಹಾವೇರಿ: ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದಲ್ಲಿ ಗಂಡನ ಮನೆಯಲ್ಲಿ ಗೃಹಿಣಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಸುನೀತಾ ದೊಡ್ಡಮನಿ (35) ಎಂದು ಗುರುತಿಸಲಾಗಿದೆ. ಮದುವೆಯಾಗಿ ಕೇವಲ 9 ತಿಂಗಳಾಗಿದ್ದು, ಅವರು ಎರಡು ತಿಂಗಳ ಗರ್ಭಿಣಿಯಾಗಿದ್ದರು ಎಂದು ಕುಟುಂಬದವರು ತಿಳಿಸಿದ್ದಾರೆ.
ಸುನೀತಾ ಸಾವಿನ ಹಿಂದೆ ವರದಕ್ಷಿಣೆ ಕಿರುಕುಳ ಕಾರಣವಾಗಿದೆ ಎಂದು ಆಕೆಯ ಕುಟುಂಬದವರು ಆರೋಪಿಸಿದ್ದಾರೆ. ಪತಿ ಗಿರೇಶ ದೊಡ್ಡಮನಿ ಹಾಗೂ ಆತನ ಕುಟುಂಬದವರು ವರದಕ್ಷಿಣೆ ತರುವಂತೆ ಪದೇ ಪದೇ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ಈ ಕಿರುಕುಳದಿಂದಲೇ ಸುನೀತಾ ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿ, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಮಗಳ ಸಾವಿನ ಸುದ್ದಿ ತಿಳಿದ ತಾಯಿ ಸೇರಿದಂತೆ ಕುಟುಂಬದವರು ತೀವ್ರವಾಗಿ ಗೋಳಾಡಿದ್ದು, ಶಿಗ್ಗಾಂವಿ ಪೊಲೀಸ್ ಠಾಣೆ ಮುಂದೆ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕುರಿತು ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.



