ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಬೆನ್ನಲ್ಲೇ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಇನ್ನೂ ಎರಡು ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕಿದ್ದು, ಬಳಿಕ ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಥಿಗಳ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.
ಈ ಕುರಿತು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ವಿಡಿಯೊ ಹಂಚಿಕೊಂಡಿರುವ ರಾಹುಲ್ ಗಾಂಧಿ, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ.
ಆದರೆ ಇದೊಂದೇ ಸಾಕಾಗುವುದಿಲ್ಲ. ಇನ್ನೂ ಎರಡು ಪ್ರಮುಖ ಬೇಡಿಕೆಗಳು ಈಡೇರಬೇಕಿದ್ದು, ಅದರ ಬಳಿಕ ಪ್ರಧಾನಿ ಮೋದಿ ವಿದ್ಯಾರ್ಥಿಗಳ ಕ್ಷಮೆಯಾಚಿಸಬೇಕು. ಅಲ್ಲದೆ ವಿದ್ಯಾರ್ಥಿಗಳ ಮೇಲೆ ನಡೆದ ದೌರ್ಜನ್ಯಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ರಾಹುಲ್ ಗಾಂಧಿ ದೇಶದ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ, “ನಿಮ್ಮ ಬಗ್ಗೆ ನನಗೆ ಹೆಮ್ಮೆಯಿದೆ. ಪ್ರಜಾಪ್ರಭುತ್ವ, ಸಂವಿಧಾನ ಮತ್ತು ನಿಮ್ಮ ಭವಿಷ್ಯಕ್ಕಾಗಿ ರಸ್ತೆಗಿಳಿದು ಹೋರಾಟ ನಡೆಸಿದ ಎಲ್ಲ ವಿದ್ಯಾರ್ಥಿಗಳು ಹಾಗೂ ಯುವಕರಿಗೆ ಅಭಿನಂದನೆಗಳು” ಎಂದು ಹೇಳಿದ್ದಾರೆ.
ರೈತರು, ಕಾರ್ಮಿಕರು, ಬಡವರು ಸೇರಿದಂತೆ ಸರ್ಕಾರದಿಂದ ದಬ್ಬಾಳಿಕೆಗೆ ಒಳಗಾದ ಪ್ರತಿಯೊಬ್ಬರೂ ತಮ್ಮ ಗೌರವಕ್ಕಾಗಿ ಸಂವಿಧಾನಾತ್ಮಕ ರೀತಿಯಲ್ಲಿ ಒಗ್ಗೂಡಿ ಹೋರಾಡುವುದು ನಿಜವಾದ ಧೈರ್ಯ ಎಂದು ಅವರು ಹೇಳಿದ್ದಾರೆ.
“ಭಯಪಡಬೇಡಿ. ಈ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುವ ಸಮಯ ಬಂದಿದೆ” ಎಂದು ರಾಹುಲ್ ಗಾಂಧಿ ತಮ್ಮ ಎಕ್ಸ್ ಪೋಸ್ಟ್ನಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.



