ಉಡುಪಿ: ಕಾಪು ಬೀಚ್ನಲ್ಲಿ ಸಮುದ್ರದ ಬೃಹತ್ ಅಲೆಗಳ ಹೊಡೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಇಬ್ಬರು ಬಾಲಕರ ಮೃತದೇಹಗಳು ಪತ್ತೆಯಾಗಿವೆ. ಭಾನುವಾರ ಸಮುದ್ರದಲ್ಲಿ ಈಜಲು ತೆರಳಿದ್ದ ವೇಳೆ ಅಲೆಗಳ ಅಬ್ಬರಕ್ಕೆ ಕೊಚ್ಚಿಹೋಗಿದ್ದ ಇಬ್ಬರಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿತ್ತು. ಸೋಮವಾರ ಬೆಳಗ್ಗೆ ಮೃತದೇಹಗಳು ಪತ್ತೆಯಾಗಿವೆ.
ಮೃತರನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಾವಿನಕೊಪ್ಪ ನಿವಾಸಿ ಅಲ್ತಾಫ್ ಅವರ ಪುತ್ರ ಸಮೀರ್ (20) ಹಾಗೂ ದಾವಣಗೆರೆಯ ಅಹಮ್ಮದಿ ನಗರದ ನಿವಾಸಿ ಝಿಯಾವುಲ್ಲಾ ಅವರ ಪುತ್ರ ಮಲ್ಲಿಕ್ ರಿಹಾನ್ (15) ಎಂದು ಗುರುತಿಸಲಾಗಿದೆ.
ಭಾನುವಾರ ದಾವಣಗೆರೆಯಿಂದ 12 ಮಂದಿ ಪ್ರವಾಸಕ್ಕಾಗಿ ಕಾಪು ಬೀಚ್ಗೆ ಆಗಮಿಸಿದ್ದರು. ಈ ಪೈಕಿ ಐವರು ಸಮುದ್ರದಲ್ಲಿ ಈಜಲು ನೀರಿಗಿಳಿದಿದ್ದರು. ಈ ಸಂದರ್ಭದಲ್ಲಿ ಏಕಾಏಕಿ ಅಪ್ಪಳಿಸಿದ ಬೃಹತ್ ಅಲೆಗಳ ಹೊಡೆತಕ್ಕೆ ಮೂವರು ಕೊಚ್ಚಿಕೊಂಡು ಹೋಗಿದ್ದರು.
ಘಟನೆಯನ್ನು ಗಮನಿಸಿದ ತಕ್ಷಣ ಕಾರ್ಯಪ್ರವೃತ್ತರಾದ ಜೀವರಕ್ಷಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಓರ್ವನನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದರು. ಆದರೆ, ಉಳಿದ ಇಬ್ಬರು ಸಮುದ್ರದಲ್ಲಿ ನಾಪತ್ತೆಯಾಗಿದ್ದರು.
ಭಾನುವಾರದಿಂದಲೇ ನಾಪತ್ತೆಯಾದವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿಸಲಾಗಿತ್ತು. ಸೋಮವಾರ ಬೆಳಗ್ಗೆ ಇಬ್ಬರ ಮೃತದೇಹಗಳು ಪತ್ತೆಯಾಗಿದ್ದು, ಪ್ರವಾಸಕ್ಕೆ ಬಂದಿದ್ದ ಕುಟುಂಬಸ್ಥರಲ್ಲಿ ತೀವ್ರ ಶೋಕ ಆವರಿಸಿದೆ.









