ನವದೆಹಲಿ: ನಟಿ ತ್ರಿಷಾ ಕುರಿತು ಅವಹೇಳನಕಾರಿ ಹಾಗೂ ದ್ವಂದ್ವಾರ್ಥದ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ಮೇಲೆ ತಮಿಳುನಾಡು ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಬಂಧನಕ್ಕೊಳಗಾದ ಬೆನ್ನಲ್ಲೇ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ. ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ, “ಸನಾತನ ಧರ್ಮವನ್ನು ಅವಮಾನಿಸಿದ್ದ ವ್ಯಕ್ತಿ ಈಗ ಮಹಿಳೆಯ ವಿರುದ್ಧದ ಅವಹೇಳನಕಾರಿ ಹೇಳಿಕೆಗೆ ಕಾನೂನು ಕ್ರಮ ಎದುರಿಸುತ್ತಿದ್ದಾರೆ” ಎಂದು ಕುಟುಕಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅಮಿತ್ ಮಾಳವೀಯ, “ಮಹಿಳೆಯ ಘನತೆಗೆ ಧಕ್ಕೆ ತರುವ ರೀತಿಯ ಸಾರ್ವಜನಿಕ ಹೇಳಿಕೆಗಳಿಗೆ ಕಾನೂನು ಕ್ರಮ ಅಗತ್ಯ. ಉದಯನಿಧಿ ಬಂಧನ ಸರಿಯಾದ ಕ್ರಮ” ಎಂದು ಅಭಿಪ್ರಾಯಪಟ್ಟಿದ್ದಾರೆ.
ಕಾವೇರಿ ಜಲ ವಿವಾದ ಕುರಿತು ತಂಜಾವೂರಿನಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡುತ್ತಿದ್ದ ವೇಳೆ ಉದಯನಿಧಿ ಸ್ಟಾಲಿನ್ ಮುಖ್ಯಮಂತ್ರಿ ವಿಜಯ್ ಸರ್ಕಾರವನ್ನು ಟೀಕಿಸುತ್ತಿದ್ದರು. ಇದೇ ವೇಳೆ ಸಭೆಯಲ್ಲಿ “ತ್ರಿಷಾ… ತ್ರಿಷಾ…” ಎಂಬ ಘೋಷಣೆಗಳು ಕೇಳಿಬಂದಾಗ, ಉದಯನಿಧಿ ತಮಿಳಿನಲ್ಲಿ ದ್ವಂದ್ವಾರ್ಥ ಮೂಡಿಸುವ ರೀತಿಯಲ್ಲಿ ಪ್ರತಿಕ್ರಿಯಿಸಿದ್ದರು. ಈ ಹೇಳಿಕೆ ನಟಿ ತ್ರಿಷಾ ಅವರನ್ನು ಪರೋಕ್ಷವಾಗಿ ಗುರಿಯಾಗಿಸಿ ಮಹಿಳೆಯನ್ನು ಅವಮಾನಿಸುವ ರೀತಿಯಲ್ಲಿದೆ ಎಂದು ಟಿವಿಕೆ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿ ಕ್ರಮಕ್ಕೆ ಆಗ್ರಹಿಸಿದ್ದವು.
ಪ್ರಕರಣ ದಾಖಲಾಗುತ್ತಿದ್ದಂತೆಯೇ ಪೊಲೀಸರು ಉದಯನಿಧಿಯನ್ನು ಬಂಧಿಸಿದ್ದು, ಈ ಬೆಳವಣಿಗೆ ತಮಿಳುನಾಡು ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ಇದೇ ವೇಳೆ, 2023ರಲ್ಲಿ “ಸನಾತನ ಧರ್ಮವು ಡೆಂಗ್ಯೂ ಮತ್ತು ಮಲೇರಿಯಾದಂತೆ, ಅದನ್ನು ನಿರ್ಮೂಲನೆ ಮಾಡಬೇಕು” ಎಂಬ ಉದಯನಿಧಿ ಹೇಳಿಕೆಯನ್ನು ಉಲ್ಲೇಖಿಸಿರುವ ಬಿಜೆಪಿ, ಅವರ ವಿರುದ್ಧ ಮತ್ತೊಮ್ಮೆ ತೀವ್ರ ಟೀಕೆ ನಡೆಸಿದೆ.



