HomeGadag Newsವಿದ್ಯಾರ್ಥಿನಿಲಯಗಳಿಗೆ ಉಪಲೋಕಾಯುಕ್ತರ ದಿಢೀರ್ ದಾಳಿ

ವಿದ್ಯಾರ್ಥಿನಿಲಯಗಳಿಗೆ ಉಪಲೋಕಾಯುಕ್ತರ ದಿಢೀರ್ ದಾಳಿ

ವಿಜಯಸಾಕ್ಷಿ ಸುದ್ದಿ, ಗದಗ: ವಿದ್ಯಾರ್ಥಿನಿಲಯಗಳಲ್ಲಿ ವಿದ್ಯಾರ್ಥಿನಿಯರಿಗೆ ಗುಣಮಟ್ಟದ ಆಹಾರ, ಸ್ವಚ್ಛತೆ ಹಾಗೂ ಅಗತ್ಯ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸುವಲ್ಲಿ ಯಾವುದೇ ನಿರ್ಲಕ್ಷ್ಯ ಸಲ್ಲದು ಎಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಪಣೀಂದ್ರ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಬುಧವಾರ ರಾತ್ರಿ ನಗರದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ದಿಢೀರ್ ಭೇಟಿ ನೀಡಿ, ಕೊಠಡಿಗಳು, ಅಡುಗೆಮನೆ, ಊಟದ ವ್ಯವಸ್ಥೆ, ಶೌಚಾಲಯ ಹಾಗೂ ಇತರ ಸೌಲಭ್ಯಗಳನ್ನು ಪರಿಶೀಲಿಸಿದರು. ಬಳಿಕ ವಿದ್ಯಾರ್ಥಿನಿಯರೊಂದಿಗೆ ನೇರ ಸಂವಾದ ನಡೆಸಿ ಸಮಸ್ಯೆಗಳನ್ನು ಆಲಿಸಿದರು.

ಪರಿಶೀಲನೆ ವೇಳೆ ಪ್ಯಾಡ್ ಬರ್ನ್ ಯಂತ್ರ ದುರಸ್ತಿಯಲ್ಲಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಅದನ್ನು ತಕ್ಷಣ ಸರಿಪಡಿಸುವಂತೆ ಸೂಚಿಸಿದರು. ವಿದ್ಯಾರ್ಥಿನಿಯರಲ್ಲಿ ಓದುವ ಅಭ್ಯಾಸ ಬೆಳೆಸಲು ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದ ದಿನಪತ್ರಿಕೆಗಳನ್ನು ನಿಯಮಿತವಾಗಿ ಒದಗಿಸುವಂತೆ, ಕಂಪ್ಯೂಟರ್‌ಗಳ ಸಂಖ್ಯೆಯನ್ನು ಹೆಚ್ಚಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಬಳಿಕ ಟಿಪ್ಪು ವೃತ್ತದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಕ್ಕೂ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಕುಡಿಯುವ ನೀರಿನ ಸಮಸ್ಯೆ, ಇಲಿಗಳ ಕಾಟ, ದಿನಪತ್ರಿಕೆ, ಗ್ರಂಥಾಲಯ ಹಾಗೂ ಕಂಪ್ಯೂಟರ್ ಕೊರತೆ ಕುರಿತು ವಿದ್ಯಾರ್ಥಿನಿಯರಿಂದ ಮಾಹಿತಿ ಪಡೆದರು. ಈ ಎಲ್ಲ ಸಮಸ್ಯೆಗಳನ್ನು ಶೀಘ್ರ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ವಿದ್ಯಾರ್ಥಿನಿಯರನ್ನು ಉದ್ದೇಶಿಸಿ ಮಾತನಾಡಿದ ಅವರು, ವಿದ್ಯಾಭ್ಯಾಸದ ಜೊತೆಗೆ ಪ್ರಾಮಾಣಿಕತೆ, ಶಿಸ್ತು ಮತ್ತು ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಮುಂದೆ ಉದ್ಯೋಗಕ್ಕೆ ಸೇರಿದಾಗ “ಲಂಚ ಪಡೆಯುವುದಿಲ್ಲ, ಲಂಚ ನೀಡುವುದಿಲ್ಲ” ಎಂಬ ಸಂಕಲ್ಪ ಮಾಡಬೇಕು ಎಂದು ಕರೆ ನೀಡಿದರು.

ಪರಿಶೀಲನೆ ವೇಳೆ ಹಿರಿಯ ನ್ಯಾಯಾಧೀಶರು ಹಾಗೂ ಕಾರ್ಯದರ್ಶಿ ಕಿರಣ್ ಪಿ.ಎಂ. ಪಾಟೀಲ, ಸುನೀಲಕುಮಾರ ಆರ್., ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡರ, ಉಪವಿಭಾಗಾಧಿಕಾರಿ ಗಂಗಪ್ಪ ಎಂ., ಲೋಕಾಯುಕ್ತ ಎಸ್‌ಪಿ ಸಿದ್ದಲಿಂಗಪ್ಪ, ಡಿವೈಎಸ್‌ಪಿ ಲೋಕೆಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

“ವಿದ್ಯಾರ್ಥಿನಿಲಯಗಳಲ್ಲಿ ಸ್ವಚ್ಛತೆ, ಗುಣಮಟ್ಟದ ಆಹಾರ ಮತ್ತು ಮೂಲಸೌಕರ್ಯಗಳಿಗೆ ಮೊದಲ ಆದ್ಯತೆ ನೀಡಬೇಕು. ವಿದ್ಯಾರ್ಥಿನಿಯರ ಸಮಸ್ಯೆಗಳನ್ನು ವಿಳಂಬವಿಲ್ಲದೆ ಪರಿಹರಿಸಬೇಕು.”

ಕೆ.ಎನ್. ಪಣೀಂದ್ರ, ಉಪಲೋಕಾಯುಕ್ತ ನ್ಯಾಯಮೂರ್ತಿ

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img