ವಿಜಯಸಾಕ್ಷಿ ಸುದ್ದಿ, ಗದಗ: ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಪಣೀಂದ್ರ ಅವರು ಶುಕ್ರವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ (ಎಸ್ಪಿ) ಕಚೇರಿಗೆ ಭೇಟಿ ನೀಡಿ ವಿವಿಧ ಯೋಜನೆಗಳ ಅನುಷ್ಠಾನ ಹಾಗೂ ಕಾರ್ಯವೈಖರಿಯನ್ನು ಪರಿಶೀಲಿಸಿದರು.
ಈ ವೇಳೆ ಎಸ್ಪಿ ಕಚೇರಿಯಲ್ಲಿ ಜಾರಿಯಲ್ಲಿರುವ ‘ಪ್ರಭುವಿನೆಡೆಗೆ ಪ್ರಭುತ್ವ’ ಹಾಗೂ ‘ಥರ್ಡ್ ಐ’ ಯೋಜನೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಈ ಯೋಜನೆಗಳ ಬಗ್ಗೆ ಸಾರ್ವಜನಿಕರಲ್ಲಿ ಇನ್ನಷ್ಟು ಅರಿವು ಮೂಡಿಸುವ ಕೆಲಸಕ್ಕೆ ಆದ್ಯತೆ ನೀಡುವಂತೆ ಸೂಚಿಸಿದರು.
ಜನಸ್ನೇಹಿ ಪೊಲೀಸ್ ಸೇವೆಗಳು ಹಾಗೂ ತಂತ್ರಜ್ಞಾನ ಆಧಾರಿತ ಯೋಜನೆಗಳ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳುವಂತೆ ವ್ಯಾಪಕ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಪರಿಶೀಲನೆ ಸಂದರ್ಭದಲ್ಲಿ ಹಿರಿಯ ನ್ಯಾಯಾಧೀಶರು ಹಾಗೂ ಆಪ್ತ ಕಾರ್ಯದರ್ಶಿ ಕಿರಣ್ ಪಿ.ಎಂ. ಪಾಟೀಲ, ಸುನೀಲಕುಮಾರ್ ಆರ್., ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ ಹಾಗೂ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್. ಉಪಸ್ಥಿತರಿದ್ದರು.



