ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ ಪ್ರಕರಣ ಸಂಬಂಧ 5 ಮಂದಿ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ (40) ಅವರನ್ನು ಮಚ್ಚಿನಿಂದ ಹಲ್ಲೆ ಮಾಡಿ ಬರ್ಬರವಾಗಿ ಹತ್ಯೆ ಮಾಡಿದ್ದರು. ಆರೋಪಿಗಳು ಬಜರಂಗದಳ ಕಾರ್ಯಕರ್ತರು ಎನ್ನಲಾಗಿದೆ.
ಇನ್ನೂ ಈ ಸಂಬಂಧ ಸಂಜಯ್, ಭೂಷಣ್, ಮಿಥುನ್ ಸೇರಿದಂತೆ 5 ಜನರನ್ನು ವಶಕ್ಕೆ ಪಡೆಯಲಾಗಿದೆ.. ಹತ್ಯೆಗೆ ಬಳಸಲಾದ ಮಚ್ಚು ಹಾಗೂ ಘಟನೆಗೆ ಸಂಬಂಧಿಸಿದ ಕೆಲವು ಮಹತ್ವದ ಸಾಕ್ಷ್ಯಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಕಲ್ಮರಡಿ ಮಠದ ಕಿರಿದಾದ ರಸ್ತೆಯಲ್ಲಿ ಕಾರಿನಲ್ಲಿ ತೆರಳುತ್ತಿದ್ದಾಗ ಬೈಕ್ನಲ್ಲಿ ಅಡ್ಡಗಟ್ಟಿದ ಹಂತಕರ ತಂಡ ಅವರ ಮೇಲೆ ಮಚ್ಚಿನಿಂದ ದಾಳಿ ಮಾಡಿದೆ. ನಂತರ ಮಚ್ಚನ್ನು ಅಲ್ಲೇ ಬಿಸಾಡಿ ಹಂತಕರು ತೆರಳಿದ್ದಾರೆ.
ಘಟನೆಯ ನಂತರ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿದ ಶಾಸಕ ಆನಂದ್, ‘ಬ್ಯಾನರ್ ತೆರವು ವಿಚಾರವಾಗಿ ಗಲಾಟೆ ನಡೆದಿದೆ. ನಂತರ ಗಣೇಶ್ ಅವರನ್ನು ಕರೆಸಿ ಕೊಲೆ ಮಾಡಿದ್ದಾರೆ. ಈ ಪ್ರಕರಣದಲ್ಲಿ 8 ಜನರು ಶಾಮೀಲಾಗಿರುವ ಶಂಕೆ ಇದೆ. ಕೆಲವು ದಿನಗಳಿಂದಲೇ ಎರಡು ಗುಂಪುಗಳ ನಡುವೆ ಉದ್ವಿಗ್ನತೆ ಇತ್ತು. ಪೊಲೀಸರು ಸಮಯಕ್ಕೆ ಕ್ರಮ ಕೈಗೊಂಡಿದ್ದರೆ ಈ ಘಟನೆ ತಪ್ಪಿಸಬಹುದಿತ್ತು’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಘಟನೆ ಬಳಿಕ ಸಖರಾಯಪಟ್ಟಣದಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ. ಆರೋಪಿಗಳ ಪತ್ತೆಗೆ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಚಿಕ್ಕಮಗಳೂರು ಎಸ್‌ಪಿ ವಿಕ್ರಮ್ ಆಮ್ಟೆ ತಿಳಿಸಿದ್ದಾರೆ.


