ಮಡಿಕೇರಿ: ಕೊಡಗು ಜಿಲ್ಲೆಯ ಕುಟ್ಟ ವ್ಯಾಪ್ತಿಯ ಹೋಂಸ್ಟೇಯೊಂದರಲ್ಲಿ ಅಮೆರಿಕದ ಪ್ರವಾಸಿ ಮಹಿಳೆ ಮೇಲೆ ಅತ್ಯಾಚಾರ ನಡೆದಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಈ ಪ್ರಕರಣದಲ್ಲಿ ಹೋಂಸ್ಟೇ ಮಾಲೀಕ ಪೊನ್ನಪ್ಪ ಅವರನ್ನು ಕಾನೂನುಬಾಹಿರವಾಗಿ ಬಂಧಿಸಲಾಗಿದೆ ಎಂದು ಪರಿಗಣಿಸಿದ್ದ ಹೈಕೋರ್ಟ್, ಅವರಿಗೆ ₹5 ಲಕ್ಷ ಪರಿಹಾರ ನೀಡುವಂತೆ ಈ ಹಿಂದೆ ಆದೇಶಿಸಿತ್ತು. ಆದರೆ ನ್ಯಾಯಾಲಯದ ನಿರ್ದೇಶನದಂತೆ ಒಂದು ತಿಂಗಳೊಳಗೆ ಪರಿಹಾರ ಪಾವತಿಯಾಗಿಲ್ಲ ಎಂದು ಆರೋಪಿಸಿ ಪೊನ್ನಪ್ಪ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಯಂತ್ ಬ್ಯಾನರ್ಜಿ ನೇತೃತ್ವದ ವಿಭಾಗೀಯ ನ್ಯಾಯಪೀಠ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದೆ. ಅಲ್ಲದೆ, ಮೂರು ವಾರಗಳೊಳಗೆ ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರಕ್ಕೆ ನ್ಯಾಯಪೀಠ ನಿರ್ದೇಶನ ನೀಡಿದೆ.
ಪೊಲೀಸರಿಗೆ ಮಾಹಿತಿ ನೀಡದ ಆರೋಪ
ಹೋಂಸ್ಟೇಯಲ್ಲಿ ಅತ್ಯಾಚಾರ ಪ್ರಕರಣ ನಡೆದಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿಲ್ಲ ಎಂಬ ಆರೋಪದಡಿ ಪೊನ್ನಪ್ಪ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದನ್ನು ಪ್ರಶ್ನಿಸಿ ಅವರು ಹೈಕೋರ್ಟ್ ಮೊರೆ ಹೋಗಿದ್ದರು.
ತಮ್ಮ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದ್ದ ಪೊನ್ನಪ್ಪ, ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಪಡಿಸುವಂತೆ ಹಾಗೂ ₹15 ಲಕ್ಷ ಪರಿಹಾರ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.
₹5 ಲಕ್ಷ ಪರಿಹಾರ ನೀಡಲು ಈ ಹಿಂದೆ ಆದೇಶ
ಈ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿಯನ್ನು ಭಾಗಶಃ ಪುರಸ್ಕರಿಸಿತ್ತು. ಹೋಂಸ್ಟೇ ಮಾಲೀಕರ ಮೂಲಭೂತ ಹಕ್ಕು ಉಲ್ಲಂಘನೆಯಾಗಿದೆ ಎಂದು ಅಭಿಪ್ರಾಯಪಟ್ಟಿದ್ದ ನ್ಯಾಯಪೀಠ, ರಾಜ್ಯ ಸರ್ಕಾರವು ಒಂದು ತಿಂಗಳೊಳಗೆ ₹5 ಲಕ್ಷ ಪರಿಹಾರ ಪಾವತಿಸುವಂತೆ ಆದೇಶಿಸಿತ್ತು.
ಆದರೆ ನಿಗದಿತ ಅವಧಿಯೊಳಗೆ ಪರಿಹಾರ ಪಾವತಿಯಾಗಿಲ್ಲ ಎಂದು ಆರೋಪಿಸಿ ಪೊನ್ನಪ್ಪ ಇದೀಗ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆ ನಡೆಸಿರುವ ವಿಭಾಗೀಯ ನ್ಯಾಯಪೀಠ ರಾಜ್ಯ ಸರ್ಕಾರದ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಿದ್ದು, ಮೂರು ವಾರಗಳಲ್ಲಿ ಉತ್ತರ ಸಲ್ಲಿಸುವಂತೆ ಸೂಚಿಸಿದೆ.



