ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯುವುದು ಖಚಿತವಾದ ಬೆನ್ನಲ್ಲೇ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಲೋಕಭವನದಲ್ಲಿ ಡೆಪ್ಯುಟಿ ಸ್ಪೀಕರ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸುವ ಮೂಲಕ ಅವರು ಸ್ಪೀಕರ್ ಹುದ್ದೆಯಿಂದ ನಿರ್ಗಮಿಸಿದ್ದಾರೆ.
ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲು ಸಿದ್ಧರಾಗಿರುವ ಖಾದರ್ ಅವರಿಗೆ ಮುಖ್ಯಮಂತ್ರಿ ನಿಯೋಜಿತ ಡಿ.ಕೆ. ಶಿವಕುಮಾರ್ ಅವರಿಂದ ಕರೆ ಬಂದ ಬಳಿಕ ರಾಜೀನಾಮೆ ಪ್ರಕ್ರಿಯೆ ಪೂರ್ಣಗೊಂಡಿದೆ ಎನ್ನಲಾಗಿದೆ.
ಸ್ಪೀಕರ್ ಆಗಿ ಮೂರು ವರ್ಷಗಳ ಅವಧಿಯಲ್ಲಿ ಸಹಕಾರ ನೀಡಿದ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರಿಗೆ ಖಾದರ್ ಕೃತಜ್ಞತೆ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ನಿರ್ಧಾರದ ಬಗ್ಗೆ ಮಾಹಿತಿ ನೀಡಿದ್ದಾರೆ.
ಸಚಿವ ಸ್ಥಾನ ಕುರಿತು ಪ್ರತಿಕ್ರಿಯಿಸಿರುವ ಖಾದರ್, ಯಾವುದೇ ಖಾತೆಗೆ ಬೇಡಿಕೆ ಇಟ್ಟಿಲ್ಲ. ಆದರೆ ಆರೋಗ್ಯ ಅಥವಾ ವಸತಿ ಖಾತೆ ಸಿಕ್ಕರೆ ಉತ್ತಮ. ಪಕ್ಷ ಯಾವ ಜವಾಬ್ದಾರಿ ನೀಡಿದರೂ ನಿಭಾಯಿಸಲು ಸಿದ್ಧನಿದ್ದೇನೆ ಎಂದು ಹೇಳಿದ್ದಾರೆ.
ಖಾದರ್ ಸಚಿವರಾಗುವುದು ಬಹುತೇಕ ಖಚಿತವಾಗಿರುವ ಕಾರಣ ಅವರ ಬೆಂಬಲಿಗರು ಈಗಾಗಲೇ ಸಂಭ್ರಮಾಚರಣೆ ಆರಂಭಿಸಿದ್ದು, ಬೆಂಗಳೂರಿನ ನಿವಾಸಕ್ಕೆ ಭೇಟಿ ನೀಡಿ ಶುಭಾಶಯ ಕೋರುತ್ತಿದ್ದಾರೆ.



