ಬೆಳಗಾವಿ: ಬೈಲಹೊಂಗಲ ತಾಲೂಕಿನ ದೇಶನೂರು ಗ್ರಾಮದಲ್ಲಿ ವಾಲ್ಮೀಕಿ ಭವನ ನಿರ್ಮಾಣ ಸಂಬಂಧ ಉಂಟಾದ ವಿವಾದ ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಎರಡು ಸಮುದಾಯಗಳ ನಡುವೆ ಘರ್ಷಣೆ ಹಾಗೂ ಕಲ್ಲು ತೂರಾಟ ನಡೆದಿದೆ.
ವಾಲ್ಮೀಕಿ ಭವನ ನಿರ್ಮಾಣಕ್ಕೆ ಸಂಬಂಧಿಸಿದ ಸರ್ವೆಗೆ ಸದಾಶಿವ ಭಜಂತ್ರಿ ಕುಟುಂಬ ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ಕೆಲವರಿಂದ ಮನೆ ಮೇಲೆ ಕಲ್ಲು ತೂರಾಟ ನಡೆದಿದೆ ಎನ್ನಲಾಗಿದೆ. ನೂರಾರು ಮಂದಿ ದಾಳಿ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.
ಘಟನೆಯ ವೇಳೆ ಮನೆಯೊಳಗೆ ಇದ್ದ ಕುಟುಂಬದವರು ಬಾಗಿಲು ಮುಚ್ಚಿಕೊಂಡು ಜೀವ ಉಳಿಸಿಕೊಂಡಿದ್ದಾರೆ. ದಾಳಿಯಿಂದ ಮನೆಗೆ ಮತ್ತು ಶೌಚಾಲಯಕ್ಕೆ ಹಾನಿಯಾಗಿದೆ. ಘಟನೆಯಲ್ಲಿ ವೃದ್ಧೆಯೊಬ್ಬರು ಗಾಯಗೊಂಡಿದ್ದು, ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಬೆಳಗಾವಿ ಎಸ್ಪಿ ಕೆ. ರಾಮರಾಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನೇಸರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗ್ರಾಮದಲ್ಲಿ ಭದ್ರತೆ ಹೆಚ್ಚಿಸಲಾಗಿದೆ.



