ಬೆಂಗಳೂರು: ವಾಲ್ಮೀಕಿ, ಮೂಡಾ ಹಗರಣಗಳು ಕಾಂಗ್ರೆಸ್ ಸರ್ಕಾರಕ್ಕೆ ಮಗ್ಗುಲ ಮುಳ್ಳಾಗಿವೆ, ಬೆಂಬಿಡದ ಭೂತದಂತೆ ಕಾಡ್ತಿವೆ. ಇದರ ಬೆನ್ನಲ್ಲೇ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಕೋಟ್ಯಂತರ ರೂ. ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ನಾಗೇಂದ್ರ ಅವರನ್ನು ಹೆಚ್ಚಿನ ವಿಚಾರಣೆಗೆ 6 ದಿನಗಳ ಕಾಲ ಇ.ಡಿ ಕಸ್ಟಡಿಗೆ ವಹಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಹೆಚ್ಚಿನ ವಿಚಾರಣೆ, ಮಹಜರು ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ನಾಗೇಂದ್ರ ಅವರನ್ನು ಯಲಹಂಕದ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಜು.18 ರ ವರೆಗೆ ಇ.ಡಿ ಕಸ್ಟಡಿಗೆ ನೀಡಿ ನ್ಯಾಯಾದೀಶರು ಆದೇಶಿಸಿದ್ದಾರೆ. ಬಳಿಕ ನ್ಯಾಯಾಧೀಶರ ಮನೆಯಿಂದ ಶಾಂತಿನಗರದಿಂದ ಇ.ಡಿ ಕಚೇರಿಗೆ ಆರೋಪಿಯನ್ನು ಇ.ಡಿ ಅಧಿಕಾರಿಗಳು ಕರೆದೊಯ್ದಿದ್ದಾರೆ.
ನಿಗಮದಲ್ಲಿ ನೂರಾರು ಕೋಟಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಮೂರು ದಿನಗಳ ಕಾಲ ವಿಚಾರಣೆ ನಡೆಸಿದ ಬಳಿಕ ಕಾಂಗ್ರೆಸ್ ಶಾಸಕ ನಾಗೇಂದ್ರರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಶುಕ್ರವಾರ ಬಂಧಿಸಿದರು. ಬಳಿಕ ರಾತ್ರಿ ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇನ್ನೂಬಿಜೆಪಿ ಸದನದಲ್ಲಿ ಹಗರಣಗಳನ್ನೇ ಬ್ರಹ್ಮಾಸ್ತ್ರವನ್ನಾಗಿ ಮಾಡಿಕೊಂಡಿದೆ.