ಹಾವೇರಿ: ಗ್ರಾಮ ಆಡಳಿತ ಅಧಿಕಾರಿ (VAO) ನೇಮಕಾತಿ ಪರೀಕ್ಷೆಯಲ್ಲಿ 151 ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದ ಅಭ್ಯರ್ಥಿಯ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.
ಪರೀಕ್ಷಾ ಕೇಂದ್ರದ ಮುಖ್ಯಸ್ಥ ಸೇರಿದಂತೆ ಮೂವರನ್ನು ಅಮಾನತು ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಶಂಕರ್ ಬನ್ನೂರು ಎಂಬ ಅಭ್ಯರ್ಥಿ ಪೊಲೀಸ್ ಕಾನ್ಸ್ಟೆಬಲ್ ನೇಮಕಾತಿ ಪರೀಕ್ಷೆಯಲ್ಲಿ 25 ಅಂಕ ಹಾಗೂ VAO ನೇಮಕಾತಿ ಪರೀಕ್ಷೆಯಲ್ಲಿ 151 ಅಂಕ ಗಳಿಸಿದ್ದ. ಎರಡು ಪರೀಕ್ಷೆಗಳ ಅಂಕಗಳಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ಅನುಮಾನ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಿದಾಗ ಪರೀಕ್ಷಾ ಕೇಂದ್ರದಲ್ಲಿ ಗೂಗಲ್ ಲೆನ್ಸ್ ಬಳಸಿ ಅಕ್ರಮ ಎಸಗಿರುವುದು ಬೆಳಕಿಗೆ ಬಂದಿದೆ ಎನ್ನಲಾಗಿದೆ.
ಈ ಪ್ರಕರಣದಲ್ಲಿ ಪರೀಕ್ಷಾ ಕರ್ತವ್ಯ ನಿರ್ವಹಣೆಯಲ್ಲಿ ಲೋಪ ಎಸಗಿದ ಆರೋಪದ ಮೇಲೆ ಶಿಗ್ಗಾಂವಿಯ ಖಾಸಗಿ ಪಿಯು ಕಾಲೇಜಿನ ಪ್ರಾಚಾರ್ಯ ಹಾಗೂ ಪರೀಕ್ಷಾ ಕೇಂದ್ರದ ಮುಖ್ಯಸ್ಥ ರಮಾಕಾಂತ ಭಟ್, ಪರೀಕ್ಷಾ ಕೊಠಡಿಯ ಮೇಲ್ವಿಚಾರಕ ಬಸವರಾಜ ಸವಡಿ ಮತ್ತು ಡ್ರೆಸ್ಕೋಡ್ ಕರ್ತವ್ಯ ನಿರ್ವಹಿಸಿದ್ದ ಉಪನ್ಯಾಸಕ ರಾಜು ದುಂಡಪ್ಪನವರ ಅವರನ್ನು ಅಮಾನತುಗೊಳಿಸಲಾಗಿದೆ.
ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ನಡೆದಿರುವ ಆರೋಪದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಈ ಕ್ರಮ ಕೈಗೊಂಡಿದ್ದಾರೆ.









