ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಕಾವೇರಿ ಉಗಮ ಸ್ಥಾನವಾದ ತಲಕಾವೇರಿ ಹಾಗೂ ಭಾಗಮಂಡಲ ಭಾಗಗಳಲ್ಲಿ ಧಾರಾಕಾರ ಮಳೆಯಿಂದಾಗಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ.
ಬ್ರಹ್ಮಗಿರಿ ಬೆಟ್ಟದ ತಪ್ಪಲಿನಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಪರಿಣಾಮ ನದಿ-ತೊರೆಗಳು ತುಂಬಿ ಹರಿಯುತ್ತಿವೆ.
ಭಾರೀ ಮಳೆಯ ಪರಿಣಾಮವಾಗಿ ಪ್ರಸಿದ್ಧ ಭಾಗಮಂಡಲದ ತ್ರಿವೇಣಿ ಸಂಗಮ ಜಲಾವೃತಗೊಂಡಿದೆ. ಕಾವೇರಿ, ಕನ್ನಿಕೆ ಮತ್ತು ಸುಜ್ಯೋತಿ ನದಿಗಳ ಸಂಗಮ ಪ್ರದೇಶದಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಪ್ರವಾಹದ ನೀರು ಶ್ರೀ ಭಗಂಡೇಶ್ವರ ದೇವಾಲಯದ ಮೆಟ್ಟಿಲುಗಳ ಹಂತದವರೆಗೂ ತಲುಪಿದೆ.
ಮಳೆಯ ಅಬ್ಬರದಿಂದ ಭಾಗಮಂಡಲ–ನಾಪೋಕ್ಲು ರಸ್ತೆ ಸಂಪರ್ಕ ಕಡಿತಗೊಂಡಿದೆ. ನದಿ ನೀರು ರಸ್ತೆಯ ಮೇಲೆ ಹರಿಯುತ್ತಿರುವುದರಿಂದ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದೆ. ಸ್ಥಳೀಯರು ಹಾಗೂ ಪ್ರವಾಸಿಗರಿಗೆ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಇನ್ನೊಂದೆಡೆ, ಕಾವೇರಿ ಉಗಮ ಸ್ಥಾನವಾದ ತಲಕಾವೇರಿ ಕ್ಷೇತ್ರದಲ್ಲೂ ಮಳೆಯ ಅಬ್ಬರ ಜೋರಾಗಿದೆ. ಕ್ಷೇತ್ರದ ಮೆಟ್ಟಿಲುಗಳ ಮೇಲೆಯೇ ಮಳೆ ನೀರು ಹಾಲಿನ ಹೊಳೆಯಂತೆ ರಭಸವಾಗಿ ಹರಿಯುತ್ತಿದ್ದು, ಪ್ರಕೃತಿಯ ಅದ್ಭುತ ದೃಶ್ಯ ಕಂಡುಬಂದಿದೆ.
ಈ ಸುಂದರ ಜಲವೈಭವವನ್ನು ಕಣ್ತುಂಬಿಕೊಳ್ಳಲು ಆಗಮಿಸಿದ ಭಕ್ತರು ಹಾಗೂ ಪ್ರವಾಸಿಗರು ಮೊಬೈಲ್ಗಳಲ್ಲಿ ದೃಶ್ಯಗಳನ್ನು ಸೆರೆಹಿಡಿದು ಸಂಭ್ರಮಿಸಿದ್ದಾರೆ.
ಭಾರೀ ಮಳೆಯ ನಡುವೆಯೂ ತಲಕಾವೇರಿ ಕ್ಷೇತ್ರದಲ್ಲಿ ಧಾರ್ಮಿಕ ಕಾರ್ಯಗಳು ಮುಂದುವರಿದಿವೆ. ಅರ್ಚಕರ ತಂಡವು ಎಂದಿನಂತೆ ಪೂಜಾ ಕೈಂಕರ್ಯಗಳನ್ನು ನೆರವೇರಿಸುತ್ತಿದ್ದು, ಭಕ್ತರು ಮಳೆಯ ನಡುವೆಯೂ ಶ್ರೀ ಕಾವೇರಿ ಮಾತೆಯ ದರ್ಶನ ಪಡೆಯುತ್ತಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರಿಯುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರು ಹಾಗೂ ಪ್ರವಾಸಿಗರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.



