ಬೆಂಗಳೂರು: ನೈಋತ್ಯ ಮುಂಗಾರು ತೀವ್ರಗೊಂಡ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಮಳೆಯ ಅಬ್ಬರ ಜೋರಾಗಿದೆ.
ಚಿಕ್ಕಮಗಳೂರು ಸೇರಿದಂತೆ ಕರಾವಳಿ ಹಾಗೂ ಮಲೆನಾಡಿನ 5 ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಮುಂದಿನ ಮೂರು ದಿನಗಳ ಕಾಲ ಈ ಭಾಗಗಳಲ್ಲಿ ಪ್ರಕೃತಿ ವಿಕೋಪದ ಸಾಧ್ಯತೆ ಇರುವುದರಿಂದ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಬೆಳಗಾವಿ, ಧಾರವಾಡ, ಹಾವೇರಿ, ಹಾಸನ ಹಾಗೂ ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಇಲ್ಲಿ ಸಹ ಭಾರೀ ಮಳೆಯ ಸಾಧ್ಯತೆ ಇದೆ. ಬಾಗಲಕೋಟೆ ಹಾಗೂ ಗದಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಹೈ ಅಲರ್ಟ್ ಘೋಷಿಸಿದ್ದಾರೆ. ಸಾರ್ವಜನಿಕರು ಹಾಗೂ ಪ್ರವಾಸಿಗರು ನದಿ ತೀರ ಮತ್ತು ತಗ್ಗು ಪ್ರದೇಶಗಳಿಗೆ ತೆರಳದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಪರಿಸ್ಥಿತಿ ನಿಭಾಯಿಸಲು ತಾಲೂಕು ಮಟ್ಟದಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ತುರ್ತು ಸೇವಾ ಸಿಬ್ಬಂದಿ ಕೇಂದ್ರ ಸ್ಥಾನದಲ್ಲೇ ಇರಲು ಜಿಲ್ಲಾಡಳಿತ ಆದೇಶಿಸಿದೆ. ಜೊತೆಗೆ ಡಿಸಿ ಹಾಗೂ ಎಸ್‌ಪಿ ಕಚೇರಿಗಳಲ್ಲಿ 24×7 ಹೆಲ್ಪ್‌ಲೈನ್ ಆರಂಭಿಸಲಾಗಿದೆ. ತುರ್ತು ಸಂದರ್ಭಗಳಲ್ಲಿ 08262-238950 ಅಥವಾ 9480805100 ಸಂಖ್ಯೆಗೆ ಸಂಪರ್ಕಿಸಲು ಸೂಚಿಸಲಾಗಿದೆ.



