ಬೆಂಗಳೂರು: ಆರ್.ಆರ್.ನಗರ ಶಾಸಕ ಮುನಿರತ್ನ ಅವರ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ.
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯ ಗುರುತನ್ನು ಬಹಿರಂಗಪಡಿಸಿದ ಆರೋಪದಡಿ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಮುನಿರತ್ನ ವಿರುದ್ಧ ಈ ಹಿಂದೆ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆಯೊಬ್ಬರು ದೂರು ನೀಡಿದ್ದರು. ಇದೀಗ ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಮುನಿರತ್ನ ಅವರು ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಸಂತ್ರಸ್ತೆಯ ಗುರುತು ಪತ್ತೆಯಾಗುವ ರೀತಿಯಲ್ಲಿ ಮಾತನಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಇದರ ಜೊತೆಗೆ ಸಂತ್ರಸ್ತೆಯ ಕುಟುಂಬದ ವೈಯಕ್ತಿಕ ಮಾಹಿತಿಯನ್ನು ಬಹಿರಂಗಪಡಿಸಿರುವುದಲ್ಲದೆ, ಕುಟುಂಬದವರಿಗೆ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
BNS ಸೆಕ್ಷನ್ 72, 351(2) ಅಡಿಯಲ್ಲಿ FIR:
ಸಂತ್ರಸ್ತೆಯ ಗುರುತನ್ನು ಬಹಿರಂಗಪಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಯಶವಂತಪುರ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 72 ಹಾಗೂ 351(2) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸಂತ್ರಸ್ತೆಯ ಗುರುತನ್ನು ಸಾರ್ವಜನಿಕವಾಗಿ ಬಹಿರಂಗಪಡಿಸುವುದು ಕಾನೂನಿನಡಿ ಅಪರಾಧವಾಗಿದ್ದು, ಈ ಆರೋಪದ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಈಗಾಗಲೇ ವಿವಿಧ ಪ್ರಕರಣಗಳಿಂದ ಸುದ್ದಿಯಲ್ಲಿರುವ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿರುವುದು ರಾಜಕೀಯ ವಲಯದಲ್ಲೂ ಗಮನ ಸೆಳೆದಿದೆ. ತನಿಖೆಯ ಬಳಿಕ ಪ್ರಕರಣದ ಮುಂದಿನ ಬೆಳವಣಿಗೆಗಳು ತಿಳಿದುಬರಬೇಕಿದೆ.







