ರಾಷ್ಟ್ರಮಟ್ಟದ ಪ್ರಶಸ್ತಿ ಮುಡಿಗೇರಿಸಿದ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್

0
Spread the love

ವಿಜಯಸಾಕ್ಷಿ ಸುದ್ದಿ, ಗದಗ/ಶಿರಹಟ್ಟಿ

Advertisement

ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಲಶಕ್ತಿ ಮಂತ್ರಾಲಯ ‘ಸ್ವಚ್ಛ ಭಾರತ ಮಿಷನ್’ ಯೋಜನೆಯ ೮ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಅ. ೨ರ ಮಹಾತ್ಮಾ ಗಾಂಧೀಜಿಯವರ ಜನ್ಮದಿನದಂದು ಸ್ವಚ್ಛ ಭಾರತ್ ದಿವಸ್ ಕಾರ್ಯಕ್ರಮವು ಘನತೆವೆತ್ತ ರಾಷ್ಟ್ರಪತಿಗಳ ಅಧ್ಯಕ್ಷತೆಯಲ್ಲಿ ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯಿತು.

ಈ ಕಾರ್ಯಕ್ರಮದಲ್ಲಿ ಗದಗ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ೨ ಪ್ರಶಸ್ತಿಗಳನ್ನು ಪಡೆಯುವುದರ ಮೂಲಕ ರಾಜ್ಯದ ಘನತೆ ಹೆಚ್ಚಿಸಿದ್ದಾರೆ. ಸುಜಲಾಂ ೨.೦ ಹಾಗೂ ಸ್ವಚ್ಛ ಸರ್ವೇಕ್ಷಣೆ ಯೋಜನೆಯಡಿ ಸಮರ್ಪಕ ಕಾರ್ಯನಿರ್ವಹಣೆಗಾಗಿ ರಾಷ್ಟ್ರಮಟ್ಟದಲ್ಲಿ ಈ ಪ್ರಶಸ್ತಿ ಲಭಿಸಿದ್ದು, ತನ್ಮೂಲಕ ರಾಜ್ಯವು ಪ್ರಥಮ ಸ್ಥಾನ ಪಡೆದಿಕೊಂಡಿದೆ. ಇನ್ನು ಪ್ಲಾಸ್ಟಿಕ್ ಮುಕ್ತ, ಸಾಲಿಡ್ ವಾಟರ್ ಮ್ಯಾನೇಜ್ಮೆಂಟ್ ಹಾಗೂ ಗ್ರೇ ವಾಟರ್ ಮ್ಯಾನೇಜ್ಮೆಂಟ್‌ನಲ್ಲಿಯೂ ಉತ್ತಮ ಕಾರ್ಯನಿರ್ವಹಣೆಗೆ ಪ್ರತ್ಯೇಕ ಪ್ರಶಸ್ತಿ ಲಭಿಸಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾಗಿ ಕಾರ್ಯನಿರ್ವಹಿಸಿದ ಅವಧಿಯಲ್ಲಿ ಸ್ವಚ್ಛ ಭಾರತ್ ಮಿಷನ್(ಗ್ರಾ) ಯೋಜನೆಯಡಿ ಘನ ತ್ಯಾಜ್ಯ ನಿರ್ವಹಣೆ, ದ್ರವತ್ಯಾಜ್ಯ ನಿರ್ವಹಣೆ, ಶೌಚಾಲಯಗಳ ಬಳಕೆ, ಸುಜಲಾಂ ೨.೦ ಅಡಿಯಲ್ಲಿ ಇಂಗುಗುಂಡಿಗಳ ನಮೂದು ಮುಂತಾದ ಚಟುವಟಿಕೆಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿರುವುದನ್ನು ಪರಿಗಣಿಸಿ ನವದೆಹಲಿಯ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರಸಿಂಗ್ ಶೇಖಾವತ್‌ರು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್.ರಿಗೆ ಪ್ರಶಸ್ತಿ ನೀಡಿದರು. ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ, ಹಾವೇರಿ ಹಾಗೂ ಕೊಪ್ಪಳ ಜಿಲ್ಲೆಯ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಇತರರು ಇದ್ದರು. ಪ್ರಶಸ್ತಿಗೆ ಭಾಜನರಾದ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರಿಗೆ ಗದಗ ಜಿಲ್ಲೆಯ ಎಲ್ಲ ಅಧಿಕಾರಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.

ಪ್ರಥಮ ಸ್ಥಾನ ತಂದುಕೊಡುವಲ್ಲಿ ಜಿಲ್ಲಾಧಿಕಾರಿ ಪ್ರಮುಖ ಪಾತ್ರ

ಅತ್ಯುತ್ತಮ ಕಾರ್ಯನಿರ್ವಹಣೆಯಿಂದ ಘನತೆವೆತ್ತ ರಾಷ್ಟ್ರಪತಿಗಳ ಕಾರ್ಯಕ್ರಮದಲ್ಲಿ ರಾಜ್ಯಕ್ಕೆ ಸುಜಲಾಂ ೨.೦ ಹಾಗೂ ಸ್ವಚ್ಛ ಸರ್ವೇಕ್ಷಣಾ ಸಮರ್ಪಕ ನಿರ್ವಹಣೆಗೆ ರಾಜ್ಯಕ್ಕೆ ಪ್ರಥಮ ಸ್ಥಾನ ತಂದುಕೊಡುವಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಪ್ರಮುಖ ಪಾತ್ರ ವಹಿಸಿ ತಮ್ಮ ಕಾರ್ಯವನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ.

ಇದರೊಂದಿಗೆ ಗದಗ ಜಿಲ್ಲೆಯ ಕೀರ್ತಿಯನ್ನೂ ಹೆಚ್ಚಿಸಿದ್ದು, ಮುಂದಿನ ದಿನಗಳಲ್ಲಿ ಗದಗ ಜಿಲ್ಲೆಯಲ್ಲಿಯೂ ಉತ್ತಮ ಆಡಳಿತ ಸಿಗುವ ನಿರೀಕ್ಷೆಯಲ್ಲಿ ಜಿಲ್ಲೆಯ ಜನತೆ ಇದ್ದಾರೆ.


Spread the love

LEAVE A REPLY

Please enter your comment!
Please enter your name here