ವಿಜಯಸಾಕ್ಷಿ ಸುದ್ದಿ, ಗದಗ:

ಗದಗ-ಬೆಟಗೇರಿ ನಗರಸಭೆಯ ಅಧ್ಯಕ್ಷ , ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಸಲು ಜ. 24 ರಂದು ತೀರ್ಮಾನಿಸಲಾಗಿದೆ. ಈ ಕುರಿತು ಉಪವಿಭಾಗಧಿಕಾರಿ ರಾಯಪ್ಪ ಹುಣಸಗಿ ಮಾಹಿತಿ ನೀಡಿದ್ದಾರೆ. ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಎಲ್.ಪ್ರಸಾದ್ ಅವರು ಜ.12 ರಂದು ನಿರ್ದೇಶಿಸಿದ್ದರು.
ಗದಗ-ಬೆಟಗೇರಿ ನಗರಸಭೆಗೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಸಲು ನಿರ್ದೇಶನ ಕೋರಿರುವ ವಿಷಯವನ್ನು ಪರಿಶೀಲಿಸಲಾಗಿದೆ. ನಗರಸಭೆಗಳಿಗೆ ಸಂಬಂಧಿಸಿದಂತೆ 9ನೇ ಅವಧಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ವಿವಿಧ ಪ್ರವರ್ಗಗಳ ಮೀಸಲಾತಿ ನಿಗದಿಪಡಿಸಿ ಸರ್ಕಾರದ ಅಧಿಸೂಚನೆಯಲ್ಲಿ ಪ್ರಕಟಿಸಿದೆ. ಸದರಿ ಅಧಿಸೂಚನೆಯನ್ವಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಸಲು ನಿಯಮಾನುಸಾರ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದರು.
ಇನ್ನು ರಾಜ್ಯ ಸರ್ಕಾರ ಗದಗ-ಬೆಟಗೇರಿ ನಗರಸಭೆಯ ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಿರಿಸಿದೆ.
ಗದಗ-ಬೆಟಗೇರಿ ನಗರಸಭೆಯ 35 ವಾರ್ಡ್ ಗಳಿಗೆ
ಡಿ.27ರಂದು ಚುನಾವಣೆ ನಡೆದಿತ್ತು. ಡಿ.30 ರಂದು ಚುನಾವಣಾ ಫಲಿತಾಂಶ ಹೊರ ಬಿದ್ದಿತ್ತು. ಅದರಲ್ಲಿ ಬಿಜೆಪಿ 18, ಕಾಂಗ್ರೆಸ್ 15 ಹಾಗೂ ಇಬ್ಬರು ಪಕ್ಷೇತರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು.