ವಿಜಯಸಾಕ್ಷಿ ಸುದ್ದಿ, ನರಗುಂದ
ಆರೊಗ್ಯವಂತ ನಾಗರಿಕರು ರಕ್ತದಾನ ಮಾಡುವದರಿಂದ ಗರ್ಭಿಣಿಯರು, ಅಪಘಾತದಲ್ಲಿ ಗಾಯಗೊಂಡು ಆಪತ್ತಿನಲ್ಲಿರುವ ವ್ಯಕ್ತಿಗಳ ಜೀವ ಉಳಿಸಲಿಕ್ಕೆ ಅನಕೂಲವಾಗಲಿದೆ ಎಂದು ಚಿಕ್ಕನರಗುಂದ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಮುತ್ತು ರಾಯರಡ್ಡಿ ಅಭಿಪ್ರಾಯಪಟ್ಟರು.
ಅವರು ಗಾಂಧಿ ಜಯಂತಿ ಅಂಗವಾಗಿ ತಾಲೂಕಿನ ಚಿಕ್ಕನರಗುಂದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾ ಆಸ್ಪತ್ರೆ ಗದಗ, ಜಿಲ್ಲಾ ರಕ್ತ ನಿಧಿ ಕೇಂದ್ರ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಾಲೂಕು ಆರೋಗ್ಯಾಧಿಕಾರಿಗಳಾದ ಡಾ. ಆರ್ ಸಿ ಕೊರವನವರ ಮಾತನಾಡಿ, ರಕ್ತದಾನ ಮಾಡಿದ ನಂತರ ಅದನ್ನು ವಿಂಗಡಿಸಿ ಅವಶ್ಯಕತೆ ಇರುವ ರೋಗಿಗಳಿಗೆ ನೀಡಲಾಗುವದು. ರಕ್ತದಾನದಿಂದ ಆರೋಗ್ಯದ ಮೇಲೆ ಯಾವುದೇ ಅಡ್ಡ ಪರಿಣಾಮ ಉಂಟಾಗುವದಿಲ್ಲ ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಚಿಕ್ಕನರಗುಂದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ.ಪ್ರಶಾಂತ ಮಲ್ಲಾಪೂರ ಮಾತನಾಡಿ, ರಕ್ತದಾನ ಮಾಡುವುದರಿಂದ ದೇಹಕ್ಕೆ ಆಗುವ ಪ್ರಯೋಜನಗಳನ್ನು ತಿಳಿಸಿ, ಮೂರು ತಿಂಗಳಿಗೆ ಒಂದು ಸಾರಿ ರಕ್ತದಾನ ಮಾಡುವುದರಿಂದ ಹೃದಯ ಸಂಬಂಧಿ ಕಾಯಿಲೆ, ರಕ್ತದೊತ್ತಡ ನಿಯಂತ್ರಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಚಿಕ್ಕನರಗುಂದ ಹಾಗೂ ಬೆನಕನಕೊಪ್ಪ ಗ್ರಾಮದ 41ಜನ ಯುವಕರು ರಕ್ತದಾನ ಮಾಡಿದರು.
ಈ ಸಂದರ್ಭದಲ್ಲಿ ಗ್ರಾ.ಪಂ.ಸದಸ್ಯರಾದ ಲಕ್ಷ್ಮಣ ಕಂಬಳಿ, ಶರಣಬಸಪ್ಪ ಹಳೇಮನಿ, ಈರಮ್ಮ ಮುದಿಗೌಡ್ರ, ಶೋಭಾ ಕೋಣನ್ನವರ, ನಿರ್ಮಲಾ ತಳವಾರ, ಆಸ್ಪತ್ರೆಯ ಸಿಬ್ಬಂದಿಗಳಾದ ರವಿ, ಬೆತಾಪಲ್ಲಿ, ಶರಾವತಿ, ಸತ್ಯಮ್ಮನವರ, ರೇಶ್ಮಾ, ಪೂಜಾ, ನೇತ್ರಾವತಿ, ಲಕ್ಷ್ಮಿ, ಬಸಮ್ಮ, ಆಶಾ ಕಾರ್ಯಕರ್ತೆಯರು, ರಕ್ತ ನಿಧಿ ಸಿಬ್ಬಂದಿ, ಚಿಕ್ಕನರಗುಂದ, ಬೆನಕನಕೊಪ್ಪ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಸಂತೋಷ ಕಾರ್ಯಕ್ರಮ ನಿರೂಪಿಸಿದರು. ಈರಣ್ಣ ವಂದನಾರ್ಪಣೆಗೈದರು.