ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ರಾಜ್ಯದಲ್ಲಿ ಸರ್ಕಾರ ರಚನೆಗೆ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿವೆ. 108 ಸ್ಥಾನಗಳೊಂದಿಗೆ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಟಿವಿಕೆ ಸರ್ಕಾರ ರಚಿಸಲು ಚಟುವಟಿಕೆ ಆರಂಭಿಸಿದೆ.
ಟಿವಿಕೆಗೆ ಕಾಂಗ್ರೆಸ್ ಬೆಂಬಲ ಘೋಷಿಸಿರುವ ನಡುವೆಯೇ, ಸಾಂಪ್ರದಾಯಿಕ ಎದುರಾಳಿಗಳಾದ ಡಿಎಂಕೆ ಮತ್ತು ಎಐಎಡಿಎಂಕೆ ನಡುವೆ ಮೈತ್ರಿ ಮಾತುಕತೆ ನಡೆಯುತ್ತಿದೆ ಎಂಬ ವರದಿಗಳು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದವು. ಆದರೆ ಈ ಎಲ್ಲ ವರದಿಗಳನ್ನು ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ.
ತಮಿಳುನಾಡಿನಲ್ಲಿ ಸರ್ಕಾರ ರಚನೆಗೆ ಸಜ್ಜಾಗಿರುವ ನಟ-ರಾಜಕಾರಣಿ ವಿಜಯ್ ನೇತೃತ್ವದ ಟಿವಿಕೆ ಸರ್ಕಾರಕ್ಕೆ ಕನಿಷ್ಠ ಆರು ತಿಂಗಳ ಕಾಲ ಯಾವುದೇ ರೀತಿಯ ರಾಜಕೀಯ ಅಡೆತಡೆ ಸೃಷ್ಟಿಸುವುದಿಲ್ಲ ಎಂದು ಸ್ಟಾಲಿನ್ ತಿಳಿಸಿದ್ದಾರೆ.
ಪ್ರಸ್ತುತ ಡಿಎಂಕೆ ಯಾವುದೇ ರಾಜಕೀಯ ಗೊಂದಲ ಉಂಟುಮಾಡುವುದಿಲ್ಲ. ರಾಜ್ಯದಲ್ಲಿ ಸಾಂವಿಧಾನಿಕ ಬಿಕ್ಕಟ್ಟು ಅಥವಾ ಮತ್ತೊಮ್ಮೆ ಚುನಾವಣೆ ನಡೆಯುವ ಪರಿಸ್ಥಿತಿಯನ್ನು ನಾವು ಬಯಸುವುದಿಲ್ಲ,” ಎಂದು ಅವರು ಹೇಳಿದ್ದಾರೆ.
ಇನ್ನೂ ವಿಜಯ್ ನೇತೃತ್ವದ ಆಡಳಿತದ ಕಾರ್ಯವೈಖರಿಯನ್ನು ಆರು ತಿಂಗಳ ಕಾಲ ಸೂಕ್ಷ್ಮವಾಗಿ ಗಮನಿಸುವುದಾಗಿ ಸ್ಟಾಲಿನ್ ಸ್ಪಷ್ಟಪಡಿಸಿದ್ದಾರೆ. ಇದರೊಂದಿಗೆ ಡಿಎಂಕೆ-ಎಐಎಡಿಎಂಕೆ ಮೈತ್ರಿ ಕುರಿತು ಹರಿದಾಡುತ್ತಿದ್ದ ಊಹಾಪೋಹಗಳಿಗೆ ಸ್ಟಾಲಿನ್ ತೆರೆ ಎಳೆದಿದ್ದಾರೆ.



