ಬೆಂಗಳೂರು: ತಮ್ಮ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಆಡಿಯೋ ಕ್ಲಿಪ್ ಸಂಪೂರ್ಣ ನಕಲಿ ಆಗಿದ್ದು, ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ಬಳಸಿ ಸೃಷ್ಟಿಸಲಾಗಿದೆ ಎಂದು ಕಾಂಗ್ರೆಸ್ ನಾಯಕ ಜಮೀರ್ ಅಹ್ಮದ್ ಖಾನ್ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ವೈರಲ್ ಆಗಿರುವ ಆಡಿಯೋದಲ್ಲಿ ಕೇಳಿಬರುತ್ತಿರುವ ಧ್ವನಿ ತಮ್ಮದೇ ಅಲ್ಲ ಎಂದು ಹೇಳಿದ್ದು, ಇದೊಂದು ರಾಜಕೀಯ ಪ್ರೇರಿತ ಷಡ್ಯಂತ್ರ ಎಂದು ಆರೋಪಿಸಿದ್ದಾರೆ. ನಕಲಿ ಆಡಿಯೋ ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವವರ ವಿರುದ್ಧ ಸೈಬರ್ ಠಾಣೆಗೆ ದೂರು ಸಲ್ಲಿಸಿ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
“ಆಡಿಯೋ ಬಗ್ಗೆ ಯಾವುದೇ ರೀತಿಯ ತನಿಖೆ ನಡೆಸಿದರೂ ನಾನು ಸಿದ್ಧನಿದ್ದೇನೆ. ನಾನು ಅಂತಹ ಯಾವುದೇ ಮಾತುಗಳನ್ನು ಆಡಿಲ್ಲ. ಜನರಲ್ಲಿ ಗೊಂದಲ ಸೃಷ್ಟಿಸುವ ಉದ್ದೇಶದಿಂದ ಕೆಲವರು ಈ ರೀತಿಯ ಕೃತ್ಯಕ್ಕೆ ಮುಂದಾಗಿದ್ದಾರೆ. ಇದು ಕಿಡಿಗೇಡಿಗಳ ಕೆಲಸ. ಯಾರೂ ಈ ಆಡಿಯೋವನ್ನು ನಂಬಬಾರದು,” ಎಂದು ಜಮೀರ್ ಹೇಳಿದ್ದಾರೆ.
ರಾಜ್ಯದಲ್ಲಿ ಹೊಸ ಸಚಿವ ಸಂಪುಟ ರಚನೆಗೆ ಸಿದ್ಧತೆಗಳು ನಡೆಯುತ್ತಿರುವ ನಡುವೆಯೇ ಈ ಆಡಿಯೋ ವೈರಲ್ ಆಗಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಬುಧವಾರ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಮೊದಲ ಹಂತದಲ್ಲಿ 10 ರಿಂದ 12 ಮಂದಿ ಸಚಿವರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಜಮೀರ್ ಅಹ್ಮದ್ ಖಾನ್ ಕೂಡ ಸಚಿವ ಸ್ಥಾನ ಆಕಾಂಕ್ಷಿಗಳ ಪೈಕಿ ಪ್ರಮುಖರಾಗಿದ್ದಾರೆ.
ಇದೇ ವೇಳೆ, ದಾವಣಗೆರೆ ಉಪಚುನಾವಣೆಗೆ ಸಂಬಂಧಿಸಿದಂತೆ ಮುಸ್ಲಿಂ ಸಮುದಾಯದ ಅಸಮಾಧಾನ, ಟಿಕೆಟ್ ಹಂಚಿಕೆ ವಿವಾದ ಹಾಗೂ ಪ್ರಚಾರದಿಂದ ಕೆಲ ನಾಯಕರು ದೂರ ಉಳಿದಿದ್ದ ವಿಚಾರಗಳ ನಡುವೆ ಈ ಆಡಿಯೋ ಹೊರಬಿದ್ದಿರುವುದು ಮತ್ತಷ್ಟು ಕುತೂಹಲ ಮೂಡಿಸಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಆಡಿಯೋದಲ್ಲಿ ಸ್ಥಳೀಯ ಕಾಂಗ್ರೆಸ್ ನಾಯಕನೊಂದಿಗೆ ಮಾತುಕತೆ ನಡೆಸಿರುವಂತೆ ತೋರಿಸಲಾಗಿದ್ದು, ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಕಡಿಮೆ ಮತ ಬರುವಂತೆ ನೋಡಿಕೊಳ್ಳುವ ಕುರಿತು ಸೂಚನೆ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಆದರೆ ಈ ಆರೋಪಗಳನ್ನು ಜಮೀರ್ ಅಹ್ಮದ್ ಖಾನ್ ಸಂಪೂರ್ಣವಾಗಿ ತಳ್ಳಿಹಾಕಿದ್ದು, ಆಡಿಯೋಗೆ ಯಾವುದೇ ವಾಸ್ತವಿಕತೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪ್ರಕರಣದ ಕುರಿತು ಸೈಬರ್ ಪೊಲೀಸರು ತನಿಖೆ ಕೈಗೊಳ್ಳುವ ಸಾಧ್ಯತೆ ಇದ್ದು, ಆಡಿಯೋ ನೈಜವೇ ಅಥವಾ ಕೃತಕವಾಗಿ ಸೃಷ್ಟಿಸಲ್ಪಟ್ಟಿದೆಯೇ ಎಂಬುದು ತನಿಖೆಯಿಂದ ಸ್ಪಷ್ಟವಾಗಲಿದೆ.



