ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ನಟ ದರ್ಶನ್ ಅವರನ್ನು ಅವರ ಪತ್ನಿ ವಿಜಯಲಕ್ಷ್ಮಿ ಮತ್ತು ಸಹೋದರ ದಿನಕರ್ ಇಂದು ಭೇಟಿ ಮಾಡಿದ್ದಾರೆ.
ಈಗಾಗಲೇ ದರ್ಶನ್ ಫ್ಯಾನ್ಸ್ ಮತ್ತು ಸುದೀಪ್ ಫ್ಯಾನ್ಸ್ ನಡುವೆ ವಿವಾದ ಶುರುವಾಗಿದೆ. ಸದ್ಯ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪದಲ್ಲಿ ಜೈಲು ವಾಸ ಅನುಭವಿಸುತ್ತಿದ್ದಾರೆ. ಫ್ಯಾನ್ಸ್ ವಾರ್ ಆರಂಭ ಆದ ಬಳಿಕ ಜೈಲಿನಲ್ಲಿ ಇದೇ ಮೊದಲ ಬಾರಿಗೆ ದರ್ಶನ್ ಅವರನ್ನು ಪತ್ನಿ ವಿಜಯಲಕ್ಷ್ಮಿ ಭೇಟಿ ಆಗಿದ್ದಾರೆ. ಭೇಟಿಯ ವೇಳೆ ಹೊರಗಿನ ಘಟನೆಗಳ ಬಗ್ಗೆ ಚರ್ಚೆ ನಡೆಸಿರಬಹುದೆಂದು ತಿಳಿದುಬಂದಿದೆ.
ಮಂಗಳವಾರ ಮಧ್ಯಾಹ್ನ 3.50ರ ಸುಮಾರಿಗೆ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ಕೊಟ್ಟ ವಿಜಯಲಕ್ಷ್ಮಿ ಮತ್ತು ದಿನಕರ್ ತೂಗುದೀಪ ಅವರು ದರ್ಶನ್ ಭೇಟಿ ಮಾಡಿ ಅರ್ಧ ಗಂಟೆ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ ದರ್ಶನ್ ಹಾಗೂ ಸುದೀಪ್ ಅಭಿಮಾನಿಗಳ ನಡುವಿನ ವಾರ್ ಬಗ್ಗೆ ಇಂಚಿಂಚೂ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ ಎನ್ನಲಾಗಿದೆ. ಆದರೆ ನಟ ದರ್ಶನ್ ಅವರು, ‘ಯಾವುದಕ್ಕೂ ಹೆಚ್ಚು ತಲೆಕೆಡಿಸಿಕೊಳ್ಳಬೇಡಿ. ನಮಗೂ ಒಳ್ಳೆಯ ಸಮಯ ಬರುತ್ತದೆ. ಅಲ್ಲಿಯವರೆಗೆ ಕಾಯಬೇಕು’ ಎಂದು ಶಾಂತವಾಗಿ ಉತ್ತರಿಸಿದ್ದಾರೆ ಎನ್ನಲಾಗಿದೆ.



