ವಿಜಯಸಾಕ್ಷಿ ಸುದ್ದಿ, ಧಾರವಾಡ: 2026ರಲ್ಲಿ ಜರುಗಲಿರುವ ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಮತಕ್ಷೇತ್ರದ ಮತದಾರರ ಪಟ್ಟಿ ತಯಾರಿಕೆ ಆರಂಭವಾಗಲಿದ್ದು, ಅರ್ಹ ಮತದಾರರ ಸೆರ್ಪಡೆಗೆ ಅವಕಾಶವಿದೆ. ಮತದಾರರ ಪಟ್ಟಿಯು ಕ್ರಮಬದ್ಧವಾಗಿ ಮತ್ತು ನ್ಯಾಯಬದ್ಧವಾಗಿ ತಯಾರಾಗುವಂತೆ ಮಾಡುವಲ್ಲಿ ರಾಜಕೀಯ ಪಕ್ಷಗಳು, ಸಾರ್ವಜನಿಕರು ಸಹಕಾರ ನೀಡಬೇಕೆಂದು ಪಶ್ಚಿಮ ಪದವೀಧರ ಮತಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆ ಜರುಗಿಸಿ, ಅಧ್ಯಕ್ಷತೆ ವಹಿಸಿ, ಮಾತನಾಡಿದರು.
ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರದ ಮತದಾರರ ನೋಂದಣಾಧಿಕಾರಿ ಆಗಿರುವ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರು ಮತದಾರರ ಪಟ್ಟಿ ತಯಾರಿಕೆ ಕುರಿತು ಸೂಚನೆಗಳನ್ನು ಹೊರಡಿಸಿದ್ದು, ಅವುಗಳ ಪ್ರತಿಯನ್ನು ಎಲ್ಲ ನೋಂದಾಯಿತ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ನೀಡಲಾಗಿದೆ. ಈ ಕುರಿತು ಅರ್ಹ ಪದವೀಧರ ಮತದಾರರಲ್ಲಿ ಜಾಗೃತಿ ಮೂಡಿಸಿ, ಅವರು ನಿಯಮಾನುಸಾರ ಸದರಿ ಮತದಾರರ ಪಟ್ಟಿಗೆ ಸೆರ್ಪಡೆ ಆಗುವಂತೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ, ಭಾರತೀಯ ಜನತಾ ಪಕ್ಷದ ಪ್ರತಿನಿಧಿ ಆರ್.ಎಂ. ಕಲ್ಯಾಣಶೆಟ್ಟಿ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪ್ರತಿನಿಧಿ ಪ್ರಕಾಶ ಹಳಿಯಾಳ, ಜನತಾದಳ (ಜಾ) ಮಹಾನಗರ ಅಧ್ಯಕ್ಷ ಗುರುರಾಜ ಹುಣಸಿಮರದ, ದೇವರಾಜ ಕಂಬಳಿ, ಬಹುಜನ ಸಮಾಜ ಪಕ್ಷ ಪ್ರತಿನಿಧಿ ನಿಂಗಪ್ಪ, ಆಮ್ ಆದ್ಮಿ ಪಕ್ಷದ ಪ್ರತಿನಿಧಿ ಅವಿನಾಶ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಪ್ರಮುಖರು ಭಾಗವಹಿಸಿದ್ದರು.