ವಿಜಯಸಾಕ್ಷಿ ಸುದ್ದಿ, ಗದಗ: ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಮತ್ತು ಅಜೀವಿಕಾ ಮಿಷನ್ (ವಿಬಿಜಿ–ರಾಮ್‌ಜಿ) ಯೋಜನೆಯಡಿ ಅಕುಶಲ ಕೂಲಿಕಾರರಿಗೆ ದಿನಕ್ಕೆ ₹382 ಕೂಲಿ ನೀಡಲಾಗುತ್ತಿದ್ದು, ಗ್ರಾಮೀಣ ಪ್ರದೇಶದ ಅರ್ಹ ಕೂಲಿಕಾರರು ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ (ಗ್ರಾಮೀಣ ಉದ್ಯೋಗ) ಕುಮಾರ ಪೂಜಾರ ಹೇಳಿದರು.
ಗದಗ ತಾಲೂಕಿನ ಯಲಿಶಿರೂರ ಗ್ರಾಮದಲ್ಲಿ ವಿಬಿಜಿ–ರಾಮ್‌ಜಿ ಯೋಜನೆಯಡಿ ನಡೆಯುತ್ತಿರುವ ಸಮುದಾಯ ಕಾಮಗಾರಿಗಳನ್ನು ಪರಿಶೀಲಿಸಿ ಮಾತನಾಡಿದ ಅವರು, ಕಾಮಗಾರಿಗಳಲ್ಲಿ ಭಾಗವಹಿಸುವ ಎಲ್ಲ ಕೂಲಿಕಾರರ ಹಾಜರಾತಿಯನ್ನು ಎನ್‌ಎಂಎಂಎಸ್ (NMMS) ತಂತ್ರಾಂಶದಲ್ಲಿ ಪ್ರತಿದಿನ ಎರಡು ಬಾರಿ ಕಡ್ಡಾಯವಾಗಿ ದಾಖಲಿಸಬೇಕು ಎಂದು ಸೂಚಿಸಿದರು.
ಕಾಯಕ ಬಂಧುಗಳು ಹಾಗೂ ಕೂಲಿಕಾರರು ಬೆಳಿಗ್ಗೆ 6 ಗಂಟೆಗೆ ಕೆಲಸಕ್ಕೆ ಹಾಜರಾಗಬೇಕು. ಕೂಲಿ ಮೊತ್ತ ₹382ಕ್ಕೆ ಹೆಚ್ಚಳವಾಗಿದ್ದು, ಅಳತೆಗೆ ಅನುಗುಣವಾಗಿ ಕೆಲಸ ಮಾಡಿದರೆ ಮಾತ್ರ ಪೂರ್ಣ ಕೂಲಿ ದೊರೆಯುತ್ತದೆ ಎಂದು ತಿಳಿಸಿದರು.
ವಿಬಿಜಿ–ರಾಮ್‌ಜಿ ಯೋಜನೆಯಡಿ ಗ್ರಾಮೀಣ ಬಡ ಅಕುಶಲ ಕಾರ್ಮಿಕರಿಗೆ ಸ್ಥಳೀಯ ಮಟ್ಟದಲ್ಲೇ ಉದ್ಯೋಗ ಒದಗಿಸಲಾಗುತ್ತಿದೆ. ಕೆರೆ ಅಭಿವೃದ್ಧಿಯಂತಹ ಕಾಮಗಾರಿಗಳಿಂದ ಅಂತರ್ಜಲ ಮಟ್ಟವೂ ಹೆಚ್ಚಳವಾಗಲಿದೆ. ಯೋಜನೆಯಡಿ ಉದ್ಯೋಗ ಚೀಟಿ ಹೊಂದಿರುವ ಪ್ರತಿ ಕುಟುಂಬಕ್ಕೆ ವರ್ಷಕ್ಕೆ 125 ದಿನಗಳ ಉದ್ಯೋಗ ನೀಡಲಾಗುತ್ತಿದ್ದು, ಪುರುಷ–ಮಹಿಳೆ ಎಂಬ ಭೇದವಿಲ್ಲದೆ ಸಮಾನ ಕೂಲಿ ನೀಡಲಾಗುತ್ತಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಿವಕುಮಾರ ವಾಲಿ, ತಾಪಂ ಐಇಸಿ ಸಂಯೋಜಕ ವೀರೇಶ ಬಸನಗೌಡ್ರ, ತಾಂತ್ರಿಕ ಸಹಾಯಕ ಮಂಜುನಾಥ ತಳವಾರ, ಬಿಲ್ ಕಲೆಕ್ಟರ್ ಪ್ರಕಾಶ ಬೋರಾಣಿ, ಬಿಎಫ್‌ಟಿ ದುರ್ಗಪ್ಪ ಆಲೂರ, ಕಾಯಕ ಬಂಧುಗಳು ಹಾಗೂ ಕೂಲಿಕಾರರು ಉಪಸ್ಥಿತರಿದ್ದರು.



