ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ತಾಲೂಕಿನಲ್ಲಿ ತೀವ್ರ ಬರಗಾಲದಿಂದ ರೈತರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ವರದಾಪುರ ಗ್ರಾಮದಲ್ಲಿ ಬೆಳೆ ಹಾನಿ ಪರಿಶೀಲನೆಗೆ ಆಗಮಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವರಿಗೆ ಅಖಿಲ ಕರ್ನಾಟಕ ರೈತ ಸಂಘದ ಪದಾಧಿಕಾರಿಗಳು ಮನವಿ ಸಲ್ಲಿಸಿ, ರೈತರ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.
ತಾಲೂಕಿನಲ್ಲಿ ಸಮರ್ಪಕ ಮಳೆಯಾಗದ ಕಾರಣ ಬಿತ್ತನೆಯಾದ ಬೆಳೆಗಳು ಹಾನಿಗೊಳಗಾಗಿದ್ದು, ಜಾನುವಾರುಗಳಿಗೆ ಮೇವು ಮತ್ತು ಕುಡಿಯುವ ನೀರಿನ ತೀವ್ರ ಕೊರತೆ ಎದುರಾಗಿದೆ. ರೈತರು ಹಾಗೂ ಕೃಷಿ ಕೂಲಿ ಕಾರ್ಮಿಕರು ಸಂಕಷ್ಟದಲ್ಲಿದ್ದು, ಹಗರಿಬೊಮ್ಮನಹಳ್ಳಿ ತಾಲೂಕನ್ನು ತಕ್ಷಣವೇ ಬರಪೀಡಿತ ಪ್ರದೇಶವೆಂದು ಘೋಷಿಸಿ, ಬೆಳೆ ಹಾನಿಯ ಸಮಗ್ರ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ರಾಷ್ಟ್ರೀಕೃತ ಹಾಗೂ ಸಹಕಾರಿ ಬ್ಯಾಂಕುಗಳ ಕೃಷಿ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು. ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಸಾಲ ವಸೂಲಾತಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ, ಬಡ್ಡಿ ಮನ್ನಾ ಹಾಗೂ ಸಾಲ ಮರುಪಾವತಿಗೆ ಸೂಕ್ತ ಕಾಲಾವಕಾಶ ನೀಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಜಾನುವಾರುಗಳಿಗೆ ಮೇವು ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವುದು, ನೀರಿನ ಸಮಸ್ಯೆ ಇರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸುವುದು, ಗ್ರಾಮೀಣ ಕೂಲಿ ಕಾರ್ಮಿಕರಿಗೆ ನರೇಗಾ ಸೇರಿದಂತೆ ಉದ್ಯೋಗ ಖಾತರಿ ಯೋಜನೆಯಡಿ ನಿರಂತರ ಕೆಲಸ ನೀಡುವುದು ಹಾಗೂ ಮುಂದಿನ ಕೃಷಿ ಹಂಗಾಮಿಗೆ ಗುಣಮಟ್ಟದ ಬೀಜ, ರಸಗೊಬ್ಬರ ಮತ್ತು ಕೃಷಿ ಪರಿಕರಗಳನ್ನು ಸಹಾಯಧನದಲ್ಲಿ ವಿತರಿಸಬೇಕು ಎಂದು ಸಂಘ ಒತ್ತಾಯಿಸಿತು.
ತೋಟಗಾರಿಕೆ ಸೇರಿದಂತೆ ವಿವಿಧ ಬೆಳೆಗಳಿಗೆ ಉಂಟಾದ ನಷ್ಟವನ್ನು ಪರಿಗಣಿಸಿ ವಿಶೇಷ ಪರಿಹಾರ ಪ್ಯಾಕೇಜ್ ಘೋಷಿಸುವಂತೆ ಸಚಿವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಅಧಿಕಾರಿಗಳಾದ ಕವಿತಾ ಮನ್ನಿಕೇರಿ, ಕೃಷಿ ಇಲಾಖೆ ಅಧಿಕಾರಿಗಳು, ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಜೆ.ಎಂ. ವೀರಸಂಗಯ್ಯ, ಅಖಿಲ ಕರ್ನಾಟಕ ರೈತ ಸಂಘದ ಜಿಲ್ಲಾಧ್ಯಕ್ಷ ಸಿ.ಎ. ಗಾಳೆಪ್ಪ, ತಾಲೂಕು ಅಧ್ಯಕ್ಷ ಶಿಗೇನಹಳ್ಳಿ ಬಸವರಾಜ್, ಜಿಲ್ಲಾ ಉಪಾಧ್ಯಕ್ಷ ಬಿ. ಕುಬೇರ, ಯಮನೂರಪ್ಪ ವರದಾಪುರ, ಸೋಮು ತಳವಾರ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ರೈತರು ಉಪಸ್ಥಿತರಿದ್ದರು.



