ಮಂಡ್ಯ: ಹಳೆ ಮೈಸೂರು ಭಾಗದ ಜೀವನಾಡಿಯಾಗಿರುವ ಕೆಆರ್ಎಸ್ ಜಲಾಶಯದಲ್ಲಿ ನೀರಿನ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದ್ದು, ಆತಂಕ ಹೆಚ್ಚಾಗಿದೆ.
ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 ಅಡಿಗಳಾಗಿದ್ದು, ಇದೀಗ 95 ಅಡಿಗೆ ಇಳಿಕೆಯಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕೊರತೆ ಎದುರಾಗಿರುವುದರಿಂದ ಜಲಾಶಯಕ್ಕೆ ಬರುತ್ತಿರುವ ಒಳಹರಿವಿನ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ.
ಪ್ರಸ್ತುತ ಕೆಆರ್ಎಸ್ ಜಲಾಶಯಕ್ಕೆ ಕೇವಲ 618 ಕ್ಯೂಸೆಕ್ ಒಳಹರಿವು ದಾಖಲಾಗಿದೆ. ಆದರೆ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಸೇರಿದಂತೆ ವಿವಿಧ ಅಗತ್ಯಗಳಿಗಾಗಿ ಜಲಾಶಯದಿಂದ 4,375 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಒಳಹರಿವಿಗೆ ಹೋಲಿಸಿದರೆ ಹೊರಹರಿವಿನ ಪ್ರಮಾಣ ಹೆಚ್ಚಾಗಿರುವುದರಿಂದ ಜಲಾಶಯದ ನೀರಿನ ಸಂಗ್ರಹ ವೇಗವಾಗಿ ಕುಸಿಯುತ್ತಿದೆ.
ಬಳಕೆಗೆ ಲಭ್ಯವಿರುವುದು ಕೇವಲ 12 ಟಿಎಂಸಿ ನೀರು!
ಸದ್ಯ ಜಲಾಶಯದಲ್ಲಿ ಒಟ್ಟು 19.222 ಟಿಎಂಸಿ ನೀರು ಸಂಗ್ರಹವಿದೆ. ಇದರಲ್ಲಿ ಸುಮಾರು 7 ಟಿಎಂಸಿ ನೀರು ಡೆಡ್ ಸ್ಟೋರೇಜ್ ಆಗಿದ್ದು, ಕುಡಿಯುವ ನೀರು ಸೇರಿದಂತೆ ಇತರ ಅಗತ್ಯಗಳಿಗೆ ಬಳಕೆ ಮಾಡಬಹುದಾದ ನೀರಿನ ಪ್ರಮಾಣ ಕೇವಲ 12 ಟಿಎಂಸಿಯಷ್ಟಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ನೀರಿನ ಲಭ್ಯತೆ ಕುರಿತು ಆತಂಕ ಎದುರಾಗಿದೆ.
ತಮಿಳುನಾಡಿಗೆ ನೀರು ಹರಿಸುವ ಆದೇಶಕ್ಕೆ ಆಕ್ರೋಶ
ರಾಜ್ಯದಲ್ಲಿ ಮಳೆ ಕೊರತೆಯಿಂದ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ ಕುಸಿಯುತ್ತಿರುವ ನಡುವೆಯೇ, ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶ ನೀಡುತ್ತಿರುವುದು ರೈತರು ಹಾಗೂ ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.
ಮುಂದಿನ ಬೇಸಿಗೆಯಲ್ಲಿ ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸುವುದು ಹೇಗೆ ಎಂಬ ಚಿಂತೆ ಜನರಲ್ಲಿ ಮೂಡಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಕಾವೇರಿ ಕೊಳ್ಳದ ಜಿಲ್ಲೆಗಳಲ್ಲಿ ನೀರಿನ ಅಭಾವ ಮತ್ತಷ್ಟು ತೀವ್ರವಾಗುವ ಸಾಧ್ಯತೆಯಿದೆ. ಹೀಗಾಗಿ ಕೆಆರ್ಎಸ್ ಜಲಾಶಯದ ನೀರಿನ ಸಂಗ್ರಹದ ಮೇಲೆ ಎಲ್ಲರ ಗಮನ ನೆಟ್ಟಿದೆ.







