ಚಿಕ್ಕೋಡಿ: ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರು–ಕಲ್ಲೋಳ ಗ್ರಾಮಗಳನ್ನು ಸಂಪರ್ಕಿಸುವ ಸೇತುವೆ ಜಲಾವೃತಗೊಂಡಿದೆ.
ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಕೃಷ್ಣಾ ನದಿಯ ನೀರಿನ ಮಟ್ಟದಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. ಪ್ರಸ್ತುತ ನದಿಯಲ್ಲಿ ಸುಮಾರು 60 ಸಾವಿರ ಕ್ಯೂಸೆಕ್ ನೀರು ಹರಿಯುತ್ತಿದ್ದು, ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ.
ನೀರಿನ ಮಟ್ಟ ಹೆಚ್ಚಾದ ಪರಿಣಾಮ ಯಡೂರು–ಕಲ್ಲೋಳ ಸಂಪರ್ಕ ಸೇತುವೆ ಸಂಪೂರ್ಣ ಮುಳುಗಡೆಯಾಗಿದ್ದು, ಎರಡು ಗ್ರಾಮಗಳ ನಡುವಿನ ಸಂಚಾರ ಸ್ಥಗಿತಗೊಂಡಿದೆ. ಸ್ಥಳೀಯರು ಹಾಗೂ ವಾಹನ ಸವಾರರು ಪರ್ಯಾಯ ಮಾರ್ಗಗಳನ್ನು ಅವಲಂಬಿಸುವಂತಾಗಿದೆ.
ಪರಿಸ್ಥಿತಿಯನ್ನು ಅಧಿಕಾರಿಗಳು ನಿರಂತರವಾಗಿ ಗಮನಿಸುತ್ತಿದ್ದು, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸ್ಥಳೀಯರು ನದಿ ಹಾಗೂ ಜಲಾವೃತ ಪ್ರದೇಶಗಳ ಬಳಿ ತೆರಳದಂತೆ ಎಚ್ಚರಿಕೆ ನೀಡಲಾಗಿದೆ.



