ಬೆಂಗಳೂರು: ದೆಹಲಿಗೆ ತೆರಳಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪರವಾಗಿ ನಾವು ಇದ್ದೇವೆ. ಅವರು ನಾಳೆಯಾದರೂ ಬರಲಿ, ಯಾವುದೇ ತೊಂದರೆ ಇಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಯಲ್ಲೇ ಉಳಿದಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಡಿಸಿಎಂ ಪರವಾಗಿ ನಾವು ಇಲ್ಲಿದ್ದೇವೆ. ರಾಜ್ಯದ ಕೆಲಸಗಳನ್ನು ನಾವು ನೋಡಿಕೊಳ್ಳುತ್ತೇವೆ ಎಂದು ಹೇಳಿದರು.
ಇದೇ ವೇಳೆ ಆರ್‌ಎಸ್‌ಎಸ್ ಕುರಿತು ಮಾಜಿ ಸಂಸದ ಅನಂತ ಕುಮಾರ್ ಹೆಗ್ಡೆ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಆರ್‌ಎಸ್‌ಎಸ್ ಅನ್ನು ಬ್ಯಾನ್ ಮಾಡುತ್ತೇವೆ ಎಂದು ಯಾರೂ ಹೇಳಿಲ್ಲ. ಯಾರಿಂದಲೂ ಅದನ್ನು ನಿಷೇಧಿಸಲು ಸಾಧ್ಯವಿಲ್ಲ. ಚಟುವಟಿಕೆಗಳ ನಿಷೇಧ ಒಂದು ವಿಷಯ, ಸಂಘಟನೆಯನ್ನು ಬ್ಯಾನ್ ಮಾಡುವುದು ಬೇರೆ ವಿಷಯ ಎಂದು ಸ್ಪಷ್ಟಪಡಿಸಿದರು.
ಭಾನುವಾರ ಖಾಸಗಿ ಕಾರ್ಯಕ್ರಮದ ನಿಮಿತ್ತ ಡಿ.ಕೆ. ಶಿವಕುಮಾರ್ ದೆಹಲಿಗೆ ತೆರಳಿದ್ದರು. ಇಂದು ಬೆಳಗ್ಗೆ ಅವರು ವಾಪಸ್ ಆಗಬೇಕಾಗಿದ್ದರೂ, ಇನ್ನೂ ದೆಹಲಿಯಲ್ಲೇ ಉಳಿಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.



