ಬೆಂಗಳೂರು: ರಾಜ್ಯದ ಎಪಿಎಂಸಿ ಮಾರುಕಟ್ಟೆಗಳಲ್ಲಿ ರೈತರಿಗೆ ತೂಕದ ವಿಚಾರದಲ್ಲಿ ವಂಚನೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ.
ಆಹಾರ, ನಾಗರಿಕ ಪೂರೈಕೆ, ಗ್ರಾಹಕ ವ್ಯವಹಾರಗಳು ಮತ್ತು ಕಾನೂನು ಮಾಪನ ಶಾಸ್ತ್ರ ಇಲಾಖೆಯ ಅಧಿಕಾರಿಗಳು ರಾಜ್ಯಾದ್ಯಂತ ಏಕಕಾಲಕ್ಕೆ ತಪಾಸಣೆ ನಡೆಸಿ, 275 ವರ್ತಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ, ನಿಯಮ ಉಲ್ಲಂಘಿಸಿದ ವರ್ತಕರಿಗೆ ಒಟ್ಟು 9.8 ಲಕ್ಷ ರೂಪಾಯಿ ದಂಡ ವಿಧಿಸಿದ್ದಾರೆ.
ಇಲಾಖೆಯ ಮಹತ್ವಾಕಾಂಕ್ಷಿ ‘ಮಿಷನ್ ನಿಖರ’ ಕಾರ್ಯಾಚರಣೆಯ ಮುಂದುವರಿದ ಭಾಗವಾಗಿ ನವೆಂಬರ್ 16ರಂದು ಮುಂಜಾನೆ ರಾಜ್ಯದ ಒಂಬತ್ತು ಪ್ರಮುಖ ಕೃಷಿ ಉತ್ಪನ್ನ ಮಾರುಕಟ್ಟೆಗಳಲ್ಲಿ ತಪಾಸಣೆ ನಡೆಸಲಾಯಿತು. ಸಚಿವ ರಿಜ್ವಾನ್ ಅರ್ಷದ್ ಅವರ ಸೂಚನೆಯಂತೆ 100ಕ್ಕೂ ಹೆಚ್ಚು ಅಧಿಕಾರಿಗಳು ಮತ್ತು ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಬೆಂಗಳೂರು, ಮೈಸೂರು, ಗಂಗಾವತಿ, ರಾಯಚೂರು, ತುಮಕೂರು, ಹುಬ್ಬಳ್ಳಿ ಮತ್ತು ಬ್ಯಾಡಗಿ ಸೇರಿದಂತೆ ಪ್ರಮುಖ ಮಾರುಕಟ್ಟೆಗಳಲ್ಲಿ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 1.30ರವರೆಗೆ ತಪಾಸಣೆ ನಡೆಯಿತು.
711 ಅಂಗಡಿಗಳ ಪರಿಶೀಲನೆ; 275 ವರ್ತಕರ ವಿರುದ್ಧ ಕೇಸ್:
ರಾಜ್ಯದ ಒಂಬತ್ತು ಮಾರುಕಟ್ಟೆಗಳಲ್ಲಿ ಒಟ್ಟು 711 ಅಂಗಡಿಗಳನ್ನು ಅಧಿಕಾರಿಗಳು ಪರಿಶೀಲಿಸಿದ್ದಾರೆ. ಈ ವೇಳೆ ತೂಕದಲ್ಲಿ ಮೋಸ, ದೋಷಪೂರಿತ ತೂಕದ ಯಂತ್ರಗಳ ಬಳಕೆ, ನಿಗದಿತ ಅವಧಿಯಲ್ಲಿ ಯಂತ್ರಗಳ ಸತ್ಯಾಪನೆ ಮತ್ತು ಮುದ್ರೆ ಮಾಡಿಸದಿರುವುದು ಹಾಗೂ ಸತ್ಯಾಪನೆ ಪ್ರಮಾಣಪತ್ರವನ್ನು ಅಂಗಡಿಗಳಲ್ಲಿ ಪ್ರದರ್ಶಿಸದಿರುವುದು ಪತ್ತೆಯಾಗಿದೆ.
ಈ ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ 275 ವರ್ತಕರ ವಿರುದ್ಧ ಮೊಕದ್ದಮೆ ದಾಖಲಿಸಿ, ಒಟ್ಟು 9,80,000 ರೂಪಾಯಿ ದಂಡ ವಿಧಿಸಲಾಗಿದೆ. ಜೊತೆಗೆ ದೋಷಪೂರಿತ ಹಾಗೂ ಸತ್ಯಾಪನೆ ಮಾಡಿಸದ ತೂಕದ ಯಂತ್ರಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಮೈಸೂರಿನಲ್ಲಿ ಸಚಿವರಿಂದಲೇ ತಪಾಸಣೆ:
ಮೈಸೂರಿನ ಬಂಡಿಪಾಳ್ಯ ಎಪಿಎಂಸಿ ಮಾರುಕಟ್ಟೆಯಲ್ಲಿ ಸಚಿವ ರಿಜ್ವಾನ್ ಅರ್ಷದ್ ಖುದ್ದಾಗಿ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದರು. ಹಲವು ಮಳಿಗೆಗಳಲ್ಲಿ ರೈತರ ಉತ್ಪನ್ನಗಳನ್ನು ಸ್ವತಃ ತೂಕ ಮಾಡಿಸಿ ಪರಿಶೀಲಿಸಿದ ಅವರು, ದೋಷಪೂರಿತ ಯಂತ್ರಗಳನ್ನು ಜಪ್ತಿ ಮಾಡಿಸಿದರು.
ಮೈಸೂರಿನ ಮಾರುಕಟ್ಟೆಯೊಂದರಲ್ಲೇ 180 ಅಂಗಡಿಗಳನ್ನು ಪರಿಶೀಲಿಸಿ, 60 ಪ್ರಕರಣಗಳನ್ನು ದಾಖಲಿಸಲಾಗಿದೆ.
ತೂಕದಲ್ಲಿ ಮೋಸ ಮಾಡಿದರೆ ಕ್ರಮ: ಸಚಿವರ ಎಚ್ಚರಿಕೆ:
ರೈತರು ಮಾರುಕಟ್ಟೆಗೆ ತರುವ ಉತ್ಪನ್ನಗಳ ತೂಕವನ್ನು ಪ್ರಾಮಾಣಿಕವಾಗಿ ಮಾಡಬೇಕು. ತೂಕದಲ್ಲಿ ವಂಚನೆ ಮಾಡುವ ಮತ್ತು ದೋಷಪೂರಿತ ಯಂತ್ರಗಳನ್ನು ಬಳಸುವ ವರ್ತಕರ ವಿರುದ್ಧ ಇನ್ನು ಮುಂದೆ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಸಚಿವ ರಿಜ್ವಾನ್ ಅರ್ಷದ್ ಎಚ್ಚರಿಕೆ ನೀಡಿದ್ದಾರೆ.
ರಾಜ್ಯದ ಎಪಿಎಂಸಿ ಮಾರುಕಟ್ಟೆಗಳಲ್ಲಿ ನಡೆಯುವ ಪ್ರತಿಯೊಂದು ವ್ಯವಹಾರವೂ ನಿಖರತೆ ಮತ್ತು ಪಾರದರ್ಶಕತೆಯಿಂದ ಕೂಡಿರಬೇಕು. ಇಂದಿನ ಕಾರ್ಯಾಚರಣೆ ಮೊದಲ ಹೆಜ್ಜೆಯಾಗಿದ್ದು, ಇಂತಹ ತಪಾಸಣೆಗಳು ನಿರಂತರವಾಗಿ ನಡೆಯಲಿವೆ ಎಂದು ತಿಳಿಸಿದ್ದಾರೆ.
ಇದಲ್ಲದೆ, ರಾಜ್ಯದ ಎಲ್ಲ ಮಾರುಕಟ್ಟೆಗಳಲ್ಲಿ ಕಾನೂನು ಮಾಪನ ಶಾಸ್ತ್ರ ಇಲಾಖೆಯಿಂದ ಒಂದು ಮಾದರಿ ತೂಕದ ಯಂತ್ರವನ್ನು ಇರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ರೈತರಿಗೆ ತಮ್ಮ ಉತ್ಪನ್ನಗಳ ತೂಕದ ಬಗ್ಗೆ ಅನುಮಾನ ಬಂದರೆ ಈ ಯಂತ್ರದಲ್ಲಿ ಪರಿಶೀಲಿಸಿಕೊಳ್ಳಲು ಅವಕಾಶ ಕಲ್ಪಿಸಬೇಕು. ಪ್ರಮಾಣಿತ ತೂಕದ ನಿಯಮಗಳ ಕುರಿತು ಜಾಗೃತಿ ಮೂಡಿಸಲು ಎಲ್ಲ ಮಾರುಕಟ್ಟೆಗಳಲ್ಲಿ ಡಿಸ್‌ಪ್ಲೇ ಬೋರ್ಡ್‌ಗಳನ್ನು ಅಳವಡಿಸುವಂತೆಯೂ ನಿರ್ದೇಶನ ನೀಡಿದ್ದಾರೆ.










