ಚಿಕ್ಕಮಗಳೂರು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದ ಪ್ರತಿಭಟನೆಗಳ ಕುರಿತು ಮಾತನಾಡುವ ವೇಳೆ ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೆಹಲಿನಲ್ಲಿ ನಡೆಯುತ್ತಿರುವ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಗೆ ಪ್ರತಿಯಾಗಿ ಬಿಜೆಪಿ ವತಿಯಿಂದ ಚಿಕ್ಕಮಗಳೂರಿನಲ್ಲಿ ಆಯೋಜಿಸಿದ್ದ ‘ಯೂತ್ ಫಾರ್ ನೇಷನ್’ ಕಾರ್ಯಕ್ರಮದಲ್ಲಿ ಸಿ.ಟಿ. ರವಿ ನೀಡಿದ ಭಾಷಣ ವಿವಾದಕ್ಕೆ ಕಾರಣವಾಗಿದೆ.
ಚಿಕ್ಕಮಗಳೂರಿನ ಆಜಾದ್ ಪಾರ್ಕ್ ವೃತ್ತದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಸಿ.ಟಿ. ರವಿ, ಸಂಸತ್ ಭವನದ ಬಳಿ ನಡೆದ ಪ್ರತಿಭಟನೆಗಳನ್ನು ಟೀಕಿಸುವ ವೇಳೆ ಮುಸ್ಲಿಂ ಸಮುದಾಯವನ್ನು ಉದ್ದೇಶಿಸಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಅವರ ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದು, ಮುಸ್ಲಿಂ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಎಂಬ ಆರೋಪ ಕೇಳಿಬಂದಿದೆ.
ಈ ಹೇಳಿಕೆಯಿಂದ ಸಮುದಾಯದ ವಿರುದ್ಧ ದ್ವೇಷ ಮತ್ತು ಅಶಾಂತಿ ಉಂಟುಮಾಡುವ ಪ್ರಯತ್ನ ನಡೆದಿದೆ ಎಂದು ಆರೋಪಿಸಿ ಚಿಕ್ಕಮಗಳೂರಿನ ಜಾಮೀಯ ಮಸೀದಿ ಅಧ್ಯಕ್ಷ ಮುದಾಸೀರ್ ಪಾಷಾ ನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.
ದೂರಿನ ಆಧಾರದ ಮೇಲೆ ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ಸಿ.ಟಿ. ರವಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಕಾನೂನು ಪ್ರಕ್ರಿಯೆ ಆರಂಭಿಸಿದ್ದಾರೆ. ದ್ವೇಷಪೂರಿತ ಭಾಷಣ ನೀಡಿದ ಆರೋಪದ ಹಿನ್ನೆಲೆಯಲ್ಲಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರುದಾರರು ಆಗ್ರಹಿಸಿದ್ದಾರೆ.



