ವಿಜಯಸಾಕ್ಷಿ ಸುದ್ದಿ, ಗದಗ: ಐದು ದಶಕಗಳಿಂದ ರಾಜಕೀಯದಲ್ಲಿರುವ ಎಚ್.ಕೆ. ಪಾಟೀಲರು ಗದಗ-ಬೆಟಗೇರಿ ಅವಳಿ ನಗರದಲ್ಲಿ ಮೂಲಸೌಕರ್ಯ ಕಲ್ಪಿಸುವಲ್ಲಿ ವಿಫಲರಾಗಿದ್ದಾರೆ. ಇದು ಗದಗ ಜನತೆಗೆ ಮಾಡುತ್ತಿರುವ ಘೋರ ಅನ್ಯಾಯ ಎಂದು ಬಿಜೆಪಿ ಗದಗ ಜಿಲ್ಲಾಧ್ಯಕ್ಷ ತೋಟಪ್ಪ (ರಾಜು) ಕುರುಡಗಿ ಆರೋಪಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಗದಗ-ಬೆಟಗೇರಿ ನಗರಗಳಲ್ಲಿ ಕುಡಿಯುವ ನೀರಿನ ಪೂರೈಕೆ ಸಮರ್ಪಕವಾಗಿಲ್ಲ. ವಾರಕ್ಕೊಮ್ಮೆ ಅಥವಾ ಹತ್ತು ದಿನಗಳಿಗೊಮ್ಮೆ ನೀರು ಬರುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದರು.
ನಗರದ ಪ್ರಮುಖ ಹಾಗೂ ಆಂತರಿಕ ರಸ್ತೆಗಳು ಗುಂಡಿಗಳಿಂದ ಕೂಡಿದ್ದು, ಧೂಳು ಮತ್ತು ಕಳಪೆ ಮೂಲಸೌಕರ್ಯದಿಂದ ಸಾರ್ವಜನಿಕರು ಹಾಗೂ ವಾಹನ ಸವಾರರು ನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ. ಗದಗ-ಬೆಟಗೇರಿ ಪ್ರದೇಶದ ನೇಕಾರರು ಹಾಗೂ ಕೈಮಗ್ಗ ಕಾರ್ಮಿಕರ ಸಮಸ್ಯೆಗಳೂ ಬಗೆಹರಿದಿಲ್ಲ. ಉದ್ಯೋಗಾವಕಾಶಗಳ ಕೊರತೆಯಿಂದ ಯುವಜನರು ಮತ್ತು ಕಾರ್ಮಿಕರು ಸಂಕಷ್ಟದಲ್ಲಿದ್ದಾರೆ ಎಂದು ಹೇಳಿದ್ದಾರೆ.
ಸ್ಥಳೀಯ ಆಡಳಿತ ಹಾಗೂ ಅಧಿಕಾರಿಗಳು ಸಾರ್ವಜನಿಕರ ಕುಂದುಕೊರತೆಗಳಿಗೆ ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ. ಅಭಿವೃದ್ಧಿ ಮತ್ತು ಮೂಲಸೌಕರ್ಯ ಸಮಸ್ಯೆಗಳಿಗೆ ಪರಿಹಾರ ಕೋರಿ ಸ್ಥಳೀಯ ಯುವಕರು ಹಾಗೂ ಸಾರ್ವಜನಿಕರು ಪರದಾಡುವಂತಾಗಿದೆ ಎಂದು ರಾಜು ಕುರುಡಗಿ ಆರೋಪಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಬಡಜನರ ಸೇವೆಗಾಗಿ ಅಧಿಕಾರಕ್ಕೆ ಬಂದಿದೆ. ಆದರೆ ಸೇವೆ ಮಾಡುವುದನ್ನು ಬಿಟ್ಟು ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿದ ಅವರು, ಮುಂದಿನ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ನಾಯಕರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದ್ದಾರೆ.



