ಬೆಂಗಳೂರು: ಮಕ್ಕಳಾಗಿಲ್ಲ ಎಂಬ ವಿಚಾರವಾಗಿ ದಂಪತಿ ನಡುವೆ ನಡೆಯುತ್ತಿದ್ದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಬೆಂಗಳೂರಿನ ಕೆಂಪೇಗೌಡ ನಗರದ ಲಕ್ಷ್ಮೀಪುರದಲ್ಲಿ ನಡೆದಿದೆ. ಪತ್ನಿಯೇ ಪತಿಗೆ ಅಡುಗೆ ಮನೆಯ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಆರೋಪ ಕೇಳಿಬಂದಿದೆ.

ಕೊಲೆಯಾದ ವ್ಯಕ್ತಿಯನ್ನು ರಾಜಶೇಖರ್ (44) ಎಂದು ಗುರುತಿಸಲಾಗಿದೆ. ಅವರ ಪತ್ನಿ ಮಾಲಾಶ್ರೀ (35) ಕೊಲೆ ಆರೋಪಿಯಾಗಿದ್ದಾಳೆ. ರಾಜಶೇಖರ್ ಖಾಸಗಿ ಬ್ಯಾಂಕ್ನ ಸಾಲ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು.
ಮಕ್ಕಳ ವಿಚಾರವಾಗಿ ದಂಪತಿ ನಡುವೆ ಆಗಾಗ ಜಗಳ
ರಾಜಶೇಖರ್ ಪ್ರತಿದಿನ ರಾತ್ರಿ ಮದ್ಯಪಾನ ಮಾಡಿ ಮನೆಗೆ ಬಂದು ಪತ್ನಿಯೊಂದಿಗೆ ಜಗಳವಾಡುತ್ತಿದ್ದರು ಎನ್ನಲಾಗಿದೆ. ದಂಪತಿಗೆ ಮಕ್ಕಳಾಗಿರಲಿಲ್ಲ ಎಂಬ ವಿಚಾರವನ್ನು ಮುಂದಿಟ್ಟುಕೊಂಡು ಪತ್ನಿಗೆ ನಿತ್ಯ ಕಿರುಕುಳ ನೀಡುತ್ತಿದ್ದರು ಎಂಬ ಆರೋಪವೂ ಕೇಳಿಬಂದಿದೆ.
ಹಗಲಿನಲ್ಲಿ ಪತ್ನಿಯನ್ನು ಪ್ರೀತಿಯಿಂದ ನೋಡಿಕೊಳ್ಳುತ್ತಿದ್ದ ರಾಜಶೇಖರ್, ರಾತ್ರಿ ಮದ್ಯದ ಅಮಲಿನಲ್ಲಿ ಮನೆಗೆ ಬಂದು ಗಲಾಟೆ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಜಗಳ ವಿಕೋಪಕ್ಕೆ, ಚಾಕುವಿನಿಂದ ಇರಿದು ಹತ್ಯೆ
ನಿನ್ನೆ ರಾತ್ರಿಯೂ ಮದ್ಯಪಾನ ಮಾಡಿ ಮನೆಗೆ ಬಂದ ರಾಜಶೇಖರ್, ಮಕ್ಕಳ ವಿಚಾರವಾಗಿ ಮತ್ತೆ ಜಗಳ ತೆಗೆದಿದ್ದಾರೆ ಎನ್ನಲಾಗಿದೆ. ಈ ವೇಳೆ ದಂಪತಿ ನಡುವಿನ ವಾಗ್ವಾದ ವಿಕೋಪಕ್ಕೆ ತಿರುಗಿದ್ದು, ಆಕ್ರೋಶಗೊಂಡ ಮಾಲಾಶ್ರೀ ಮನೆಯ ಅಡುಗೆ ಮನೆಯ ಚಾಕುವಿನಿಂದ ಪತಿಯ ಎದೆಗೆ ಇರಿದಿದ್ದಾಳೆ ಎಂದು ಆರೋಪಿಸಲಾಗಿದೆ.
ಗಂಭೀರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ರಾಜಶೇಖರ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ, ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಕೆಂಪೇಗೌಡ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಮಾಲಾಶ್ರೀಯನ್ನು ವಿಚಾರಣೆಗೊಳಪಡಿಸಿ, ಪ್ರಕರಣದ ಕುರಿತು ಮುಂದಿನ ತನಿಖೆ ನಡೆಸುತ್ತಿದ್ದಾರೆ.








